ಬೆಂಗಳೂರು: ದಿ.ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರನ್ನು ಸರಕಾರಿ ಹುದ್ದೆಗೆ ಮರು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನೂತನ ಕುಮಾರಿ ಅವರು ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ಸರಕಾರ ಬದಲಾದ ಬಳಿಕ ಸೇವೆಯಿಂದ ಬಿಡುಗಡೆ ಮಾಡಲು ಆದೇಶ ಆಗಿತ್ತು. ಹೊಸ ಸರಕಾರ ಬಂದ ನಂತರ
ಹಿಂದಿನ ಸರಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ. ಶನಿವಾರ ಟ್ವೀಟ್ ಮಾಡಿರುವ ಅವರು, ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ, ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರಕಾರದ ಯಾವುದೇ ಹಸ್ತಕ್ಷೇಪವಿಲ್ಲ’ ಎಂದು ವಿವರಣೆ ನೀಡಿದ್ದಾರೆ. ‘ಪ್ರವೀಣ್ ನೆಟ್ಟಾರು ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು’ ಎಂದು ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ.