ಕಡಬ: ಮೂರು ದಿನಗಳಿಂದ ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ. ನರ ಹಂತಕ ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ.ಕಡಬದ ಕೊಂಬಾರು ರಕ್ಷಿತಾರಣ್ಯದಲ್ಲಿ ಕಾಡಾನೆ ಪತ್ತೆ ಹಚ್ಚಿ ಡಾಟ್ ಮಾಡಿ ಅರಿವಳಿಕೆ ನೀಡಲಾಗಿದೆ. ಮುಂದೆ ಸಾಕಾನೆಗಳ ಸಹಕಾರದಲ್ಲಿ ಕಾಡಾನೆಯನ್ನು ಬಂಧಿಸಿ ಆನೆ ಶಿಬಿರಕ್ಕೆ ಕರೆದೊಯ್ಯಲಾಗುತ್ತದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್ ತಿಳಿಸಿದ್ದಾರೆ.ಊರಿಗೆ ಬಂದು ಉಪಟಳ ನೀಡಿ,

ಜನರನ್ನು ಬಲಿ ತೆಗೆದುಕೊಂಡ ಕಾಡಾನೆಯನ್ನು ಸೆರೆ ಹಿಡಿಯಲು ಕಡಬ ಭಾಗದಲ್ಲಿ ಅರಣ್ಯ ಇಲಾಖೆ ಮೂರು ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿತ್ತು. ಐದು ಸಾಕಾನೆಗಳ ಸಹಕಾರದೊಂದಿಗೆ ಮಂಗಳವಾರ ಬೆಳಿಗ್ಗಿನಿಂದ ಆರಂಭಗೊಂಡ ಅರಣ್ಯ ಇಲಾಖೆಯ ಕಾರ್ಯಾಚರಣೆ ಮೂರನೇ ದಿನವಾದ ಗುರುವಾರ ಸಂಜೆಯ ವೇಳೆಗೆ ಯಶಸ್ವಿಯಾಗಿದೆ.
ಕಾಡಾನೆ ಸೆರೆ ಹಿಡಿಯಲು ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ ಆಗಮಿಸಿದ 5 ಆನೆಗಳ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಕಾಡಾನೆ ಸೆರೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು,ಪ್ರಶಾಂತ್, ಹರ್ಷ,ಕಂಜನ್ ಹಾಗು ಮಹೇಂದ್ರ ಎಂಬ ಸಾಕಾನೆಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್, ಎಸಿಎಫ್ ಪ್ರವೀಣ್ ಕುಮಾರ್, ವಲಯ ಅರಣ್ಯಾಧಿಕಾರಿಗಳಾದ ಎನ್.ಮಂಜುನಾಥ್, ಆರ್.ಗಿರೀಶ್, ರಾಘವೇಂದ್ರ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಅಧಿಕಾರಿ ಹಾಗು ಸಿಬ್ಬಂದಿಗಳ ತಂಡ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು. ನಾಗರಹೊಳೆ ಹಾಗು ಮಂಗಳೂರಿನಿಂದ ತಜ್ಞ ವೈದ್ಯಾಧಿಕಾರಿಗಳ ತಂಡವೂ ಜೊತೆಯಲ್ಲಿದ್ದರು.
ರೆಂಜಿಲಾಡಿ ಗ್ರಾಮದ ನೈಲ ಸಮೀಪ ಸೋಮವಾರ ಬೆಳಿಗ್ಗೆ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ಹಿನ್ನಲೆಯಲ್ಲಿ ಅರಣ್ಯ ಇಲಾಖೆಯು ಕಾಡಾನೆಯನ್ನು ಸೆರೆಹಿಡಿಯಲು ಕಾರ್ಯಾಚರಣೆ ಆರಂಭಿಸಿತ್ತು.