ಮಂಗಳೂರು: ಶೀಘ್ರದಲ್ಲಿಯೇ ಪತ್ರಕರ್ತರಿಗೆ ನಿವೇಶನ ಒದಗಿಸಲು ಎಲ್ಲಾ ಪ್ರಯತ್ನ ಗಳು ಮುಂದುವರಿದಿದೆ ಎಂದು ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ತಿಳಿಸಿದ್ದಾರೆ.ಮಂಗಳೂರು ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ
ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಈಗಾಗಲೇ ಮಂಗಳೂರು ಹೊರವಲಯದಲ್ಲಿ ಕಂದಾಯ ಭೂಮಿಯನ್ನು ಮಂಜೂರು ಮಾಡುವಂತೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಆದ್ಯತೆಯ ಮೇಲೆ ಸಂಘದ ಷೇರು ಹೊಂದಿದ ಸದಸ್ಯರಿಗೆ ನಿವೇಶನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ವಾರ್ಷಿಕ ಮಹಾಸಭೆಯಲ್ಲಿ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಪಾಂಡುರಂಗ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು.ಸಂಘದ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟಾ ವರದಿ ವಾಚಿಸಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಸಂಘದ ನಿರ್ದೇಶಕ ಪುಷ್ಪರಾಜ್ ಬಿ.ಎನ್. ವಂದಿಸಿದರು.ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.








































