ಮಂಗಳೂರು: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜನಸಾಮಾನ್ಯರ ಕಲ್ಯಾಣಕ್ಕೆ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಫಲಾನುಭವಿಗಳು ಹಾಗೂ ಸೌಲಭ್ಯದಿಂದ ವಂಚಿತರಾಗಿರುವ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ದೊರಕಿಸಿಕೊಡಲು ಅವರಲ್ಲಿ ಜಾಗೃತಿ ಮೂಡಿಸಲು ಇದೇ ಮಾ.16ರಂದು ಫಲಾನುಭವಿಗಳ ಸಮ್ಮೇಳನ ನಡೆಸಲು ಉದ್ದೇಶಿಸಲಾಗಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು
ಹೇಳಿದರು.ಅವರು ಮಾ.2ರಂದು ನಗರದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಈ ಕುರಿತಂತೆ ಹಮ್ಮಿಕೊಂಡಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಫಲಾನುಭವಿಗಳ ಈ ಸಮ್ಮೇಳನ ಸರ್ಕಾರದ ಕಾರ್ಯಕ್ರಮವಾಗಿದ್ದು, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶುಸಂಗೋಪನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ,ಯುವ ಜನ ಸಬಲೀಕರಣ, ಗ್ರಾಮೀಣ ಕೈಗಾರಿಕಾ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಕಂದಾಯ ಸೇರಿದಂತೆ ಹಲವು ಇಲಾಖೆಗಳಲ್ಲಿ ಸರ್ಕಾರದ ಯೋಜನೆಗಳ ಸವಲತ್ತು ಪಡೆದಿರುವ ಫಲಾನುಭವಿಗಳನ್ನು ಆಹ್ವಾನಿಸಬೇಕು, ಸಮ್ಮೇಳನಕ್ಕೆ ಮುಖ್ಯ ಮಂತ್ರಿಯವರು ಬರುವ ವಿಚಾರ ಇನ್ನೂ ನಿರ್ಧಾರ ಆಗಿಲ್ಲ. ರಾಜ್ಯ ಸಚಿವ ಸಂಪುಟದ ಹಲವು ಮಂದಿ ಸಚಿವರು ಭಾಗವಹಿಸಿ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಇಲಾಖೆಗಳ ವಿವಿಧ ಯೋಜನೆಗಳ ಅಡಿ ಸೌಲಭ್ಯಗಳನ್ನು ವಿತರಿಸಲಿದ್ದಾರೆ ಎಂದು ತಿಳಿಸಿದರು.
ಈ ಉದ್ದೇಶಕ್ಕಾಗಿ ಮೊದಲ ಸಿದ್ಧತಾ ಸಭೆ ನಡೆದಿದೆ. ಈ ಸಭೆಯಲ್ಲಿ ಸಮ್ಮೇಳನದ ತಯಾರಿ ಬಗ್ಗೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇನ್ನೂ ವಿವಿಧ ತಾಲೂಕುಗಳಲ್ಲಿ ಅಧಿಕಾರಿಗಳ ಸಭೆ ನಡೆಯಲಿದ್ದು, ಮಾರ್ಚ್ 10ರ ಬಳಿಕ ಇನ್ನೊಂದು ಸಭೆ ನಡೆಸಿ ಚರ್ಚಿಸಲಾಗುವುದು ಎಂದರು.
ಶಾಸಕರಾದ ಡಿ.ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ರವಿಕುಮಾರ್ ಎಂ. ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಚನ್ನಬಸಪ್ಪ, ಉಪ ಮೇಯರ್ ಪೂರ್ಣಿಮಾ ವೇದಿಕೆಯಲ್ಲಿದ್ದರು.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.