ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕ ಹಾಗೂ ಕೈಗಾರಿಕಾ ರಂಗಕ್ಕೆ ಹೊಸ ಶಕ್ತಿ ತುಂಬಲಿರುವ ಗಂಜಿಮಠದಲ್ಲಿ ನಿರ್ಮಾಣ ಹಂತದಲ್ಲಿರುವ ಪ್ಲಾಸ್ಟಿಕ್ ಪಾರ್ಕ್ ಯೋಜನಾ ಪ್ರದೇಶಕ್ಕೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಅವರೊಂದಿಗೆ ಇಂದು ಸ್ಥಳಕ್ಕೆ
ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ್ದಾರೆ.
ಭೇಟಿ ವೇಳೆ ಸಂಸದರು ಪಾರ್ಕ್ನ ರಸ್ತೆ, ವಿದ್ಯುತ್, ನೀರು ಸರಬರಾಜು ಸೇರಿದಂತೆ ಪ್ರಮುಖ ಮೂಲಸೌಕರ್ಯ ಕಾಮಗಾರಿಗಳನ್ನು ಕೂಲಂಕಷವಾಗಿ ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಸಂಸದರು, ಬಾಕಿ ಉಳಿದಿರುವ ಎಲ್ಲಾ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ, ಶೀಘ್ರದಲ್ಲೇ ಪೂರ್ಣ ಪ್ರಮಾಣದ ವಾಣಿಜ್ಯ ಚಟುವಟಿಕೆಗಳಿಗೆ ಚಾಲನೆ ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಗಂಜಿಮಠದ 104 ಎಕರೆ ವಿಸ್ತೀರ್ಣದಲ್ಲಿ ಈ ಬೃಹತ್ ಯೋಜನೆ ತಲೆಯೆತ್ತುತ್ತಿದೆ.








