ನವದೆಹಲಿ:ಕೇರಳದ ಭೂಕುಸಿತ ಪೀಡಿತ ವಯನಾಡು ಜಿಲ್ಲೆಗೆ ಆ.10ರಂದು (ಶನಿವಾರ) ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದಾರೆ. ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳನ್ನು ಪರಿಶೀಲನೆ ನಡೆಸಲಿದ್ದಾರೆ. ಮೋದಿ ಅವರು ನಾಳೆ ಬೆಳಿಗ್ಗೆ 11 ಗಂಟೆಗೆ
ಕಣ್ಣೂರು ತಲುಪಲಿದ್ದಾರೆ. ಅಲ್ಲಿಂದ ಅವರು ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶದ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಭೂಕುಸಿತ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮತ್ತು ಪುನರ್ವಸತಿ ಕಾರ್ಯಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಳಜಿ ಕೇಂದ್ರ ಮತ್ತು ಆಸ್ಪತ್ರೆಗೆ ಭೇಟಿ ನೀಡಲಿದ್ದು, ಸಂತ್ರಸ್ತರೊಂದಿಗೆ ಸಂವಾದ ನಡೆಸಲಿದ್ದಾರೆ.
ಈಚೆಗೆ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ದುರಂತದಲ್ಲಿ 300ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ, 200ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.