ಪಂಜ:ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ವಿವಿಧ ಇಲಾಖೆಗಳ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಒಂದೇ ವೇದಿಕೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ಪರಿಹಾರ ಪಡೆಯುವ ಉದ್ದೇಶದಿಂದ ಪ್ರಜಾಸೇವಾ ಅಭಿಯಾನ ಸಭೆಗಳನ್ನು ನಡೆಸಲಾಗುತ್ತಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಪಂಜ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ
ಸುಳ್ಯ ಹೋಬಳಿ ಮಟ್ಟದ ಪ್ರಜಾಸೇವಾ ಅಭಿಯಾನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿ ತಿಂಗಳ ಶನಿವಾರದಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಪ್ರಜಾಸೇವಾ ಅಭಿಯಾನ ಸಭೆ ನಡೆಸುವಂತೆ ಸರಕಾರ ನಿರ್ದೇಶನ ನೀಡಿದೆ. ಇದರಂತೆ ಹೋಬಳಿ ಮಟ್ಟದಲ್ಲಿ ಸಭೆ ಆಯೋಜಿಸಲಾಗುತ್ತಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು ಒಂದೇ ಸ್ಥಳದಲ್ಲಿ ಲಭ್ಯವಿರುವುದರಿಂದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ನೇರವಾಗಿ ಸಲ್ಲಿಸಿ ಪರಿಹಾರ ಪಡೆಯಲು ಅವಕಾಶವಿದೆ ಎಂದು ಶಾಸಕಿ ಸೂಚಿಸಿದರು.
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಮಾತನಾಡಿ, ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದು ಪರಿಹಾರ ಪಡೆಯಲು ಇಂತಹ ಸಭೆಗಳು ಸಹಕಾರಿಯಾಗಿವೆ. ಪಿಡಿಒ, ಗ್ರಾಮ ಆಡಳಿತಾಧಿಕಾರಿ ಸೇರಿದಂತೆ ಸ್ಥಳೀಯ ಅಧಿಕಾರಿಗಳ ಮೂಲಕ ಸಾರ್ವಜನಿಕರಿಗೆ ಅಗತ್ಯ ಮಾರ್ಗದರ್ಶನ ನೀಡಬೇಕು ಎಂದರು.
ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫಾ ಮಾತನಾಡಿ, ಸಭೆಯಲ್ಲಿ ಅರ್ಜಿ ಸಲ್ಲಿಸುವವರಿಗೆ ಹಿಂಬರಹ ನೀಡಬೇಕು. ಅರ್ಜಿಯ ಸ್ಥಿತಿ ಹಾಗೂ ಕೈಗೊಂಡ ಕ್ರಮದ ಕುರಿತು ಅವರಿಗೆ ಮಾಹಿತಿ ನೀಡುವುದರಿಂದ ಪ್ರಜಾಸೇವಾ ಅಭಿಯಾನದ ಉದ್ದೇಶ ಮತ್ತಷ್ಟು ಪರಿಣಾಮಕಾರಿಯಾಗುತ್ತದೆ ಎಂದು ಹೇಳಿದರು.
ವೇದಿಕೆಯಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ,ತಹಶೀಲ್ದಾರ್ ಮಂಜುಳಾ, ಇಓ ರಾಜಣ್ಣ ಉಪಸ್ಥಿತರಿದ್ದರು.
ಸಭೆಯಲ್ಲಿ ಹಿಂದಿನ ಅಭಿಯಾನದಲ್ಲಿ ಸ್ವೀಕರಿಸಲಾದ ಅರ್ಜಿಗಳ ವಿಲೇವಾರಿ ಹಾಗೂ ಪ್ರಸಕ್ತ ಸಭೆಯಲ್ಲಿ ಸಲ್ಲಿಕೆಯಾದ ಅರ್ಜಿಗಳ ಕುರಿತು ಪರಿಶೀಲನೆ ನಡೆಯಿತು. ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಅವರ ಜವಾಬ್ದಾರಿಗಳ ಕುರಿತು ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿ ದೊರೆಯುವಂತೆ ವ್ಯವಸ್ಥೆ ಮಾಡುವ ಬಗ್ಗೆಯೂ ಚರ್ಚಿಸಲಾಯಿತು.








