ಮಂಗಳೂರು:ಪ್ರತಿಯೊಬ್ಬ ಪ್ರಜೆಯ ಅಹವಾಲನ್ನು ಆಲಿಸಿ ಅದಕ್ಕೆ ತ್ವರಿತವಾಗಿ ಪರಿಹಾರ ಒದಗಿಸಬೇಕು ಎಂಬ ಆಶಯದಿಂದ ಪ್ರಜಾಸೇವಾ ಇಲಾಖೆಯನ್ನು ರಾಜ್ಯ ಸರಕಾರ ಕಾರ್ಯಾರಂಭ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ. ಅವರು ಶನಿವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಪುತ್ತೂರು ಪುರಭವನದಲ್ಲಿ ನಡೆದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರಕಾರದ ಪ್ರತಿಯೊಂದು ಯೋಜನೆಯ
ಅನುಕೂಲತೆಯನ್ನು ಪ್ರತಿಯೊಬ್ಬ ನಾಗರಿಕರಿಗೆ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ. ಅದಕ್ಕಾಗಿ ಜನರ ಅಹವಾಲನ್ನು ಆಲಿಸಲು ಮತ್ತು ಅದಕ್ಕೆ ಸೂಕ್ತ ಪರಿಹಾರ ಒದಗಿಸಲು ಪ್ರಜಾ ಸೇವಾ ಇಲಾಖೆಯನ್ನು ರಚಿಸಲಾಗಿದೆ. ಸಾರ್ವಜನಿಕರ ಅರ್ಜಿಗಳನ್ನು ನಿಯಮ ಬದ್ಧವಾಗಿ ಪರಿಶೀಲಿಸಿ, ವಿಲೇವಾರಿ ಮಾಡುವುದು ಪ್ರಜಾಸೇವಾ ಆಂದೋಲನದ ಉದ್ದೇಶವಾಗಿದೆ ಎಂದು ತಿಳಿಸಿದರು.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ, ಜಿಲ್ಲಾ ಪಂಚಾಯತ್ ಮಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಡಿಸಿಪಿ ರವಿಶಂಕರ್, ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್, ಪುತ್ತೂರು ತಹಶಿಲ್ದಾರ್ ಎಸ್.ಬಿ ಕೂಡಲಗಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಮತ್ತಿತರರು ಇದ್ದರು. ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಒಟ್ಟು 163 ಅರ್ಜಿಗಳು ಸ್ವೀಕೃತಗೊಂಡಿವೆ.










