ಸುಳ್ಯ: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿದ್ದ ಆರೋಪಿ ಮಹಮ್ಮದ್ ಮುಸ್ತಾಫಾ ಯಾನೆ ಪೈಚಾರ್ ಮುಸ್ತಫ ಎಂಬಾತನನ್ನು ಎನ್ಐಎ ಅಧಿಕಾರಿಗಳು ಹಾಸನದ ಸಕಲೇಶಪುರದಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಆರೋಪಿ
ಮೂಲತಃ ಸುಳ್ಯ ತಾಲೂಕಿನ ಪೈಚಾರು ನಿವಾಸಿ. 2022 ರ ಜುಲೈ 26 ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆ ನಡೆಸಲಾಗಿತ್ತು. ಕೋಳಿ ಅಂಗಡಿ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರು ಅಂಗಡಿ ಬಂದ್ ಮಾಡುತ್ತಿದ್ದ ವೇಳೆ ಬೈಕ್ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದರು.
ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎ ಹಲವು ಮಂದಿ ಆರೋಪಿಗಳನ್ನು ಬಂಧಿಸಿತ್ತು. ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ ಎನ್ಐಎ ಬಹುಮಾನದ ಘೋಷಣೆ ಮಾಡಿತ್ತು.