ಸುಳ್ಯ:ಮಾರ್ಚ್ 9ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗುತ್ತಿದ್ದು ಸುಳ್ಯ ತಾಲೂಕಿನಲ್ಲಿ ಪರೀಕ್ಷೆ ಬರೆಯಲು 1728 ವಿದ್ಯಾರ್ಥಿಗಳು ನೋಂದಾವಣೆ ಮಾಡಿ ಕೊಂಡಿದ್ದಾರೆ. ಸುಳ್ಯ ತಾಲೂಕಿನಲ್ಲಿ 2 ಮತ್ತು ಸುಬ್ರಹ್ಮಣ್ಯ ಸೇರಿ ಮೂರು ಪರೀಕ್ಷಾ ಕೇಂದ್ರಗಳಲ್ಲಿ ಸುಳ್ಯ ತಾಲೂಕಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ, ಗಾಂಧಿನಗರ ಸರಕಾರಿ ಪದವಿಪೂರ್ವ ಕಾಲೇಜು ಹಾಗು ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು ಹೀಗೆ ಮೂರು ಪರೀಕ್ಷಾ ಕೇಂದ್ರಗಳನ್ನು
ಸಿದ್ಧಪಡಿಸಲಾಗಿದೆ. ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 661 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜು ಸುಳ್ಯ, ಗಾಂಧಿನಗರ ಸರಕಾರಿ ಪದವಿಪೂರ್ವ ಕಾಲೇಜು, ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು, ಕೆವಿಜಿ ಅಮರ ಜ್ಯೋತಿ ಪದವಿಪೂರ್ವ ಕಾಲೇಜು, ಐವರ್ನಾಡು ಸರಕಾರಿ ಪದವಿಪೂರ್ವ ಕಾಲೇಜು, ಬೆಳ್ಳಾರೆ ಸರಕಾರಿ ಪದವಿಪೂರ್ವ ಕಾಲೇಜು ಹಾಗು ಸಂಪಾಜೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇಲ್ಲಿ ಪರೀಕ್ಷೆಗೆ ಹಾಜರಾಗಲಿದ್ದಾರೆ.
ಗಾಂಧಿನಗರ ಸರಕಾರಿ ಪದವಿಪೂರ್ವ ಕಾಲೇಜು ಕೇಂದ್ರದಲ್ಲಿ 569 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು, ರೋಟರಿ ಪದವಿ ಪೂರ್ವ ಕಾಲೇಜು ಹಾಗೂ ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇಲ್ಲಿನ ವಿದ್ಯಾರ್ಥಿಗಳು ಇಲ್ಲಿ ಪರೀಕ್ಷೆಗೆ ಹಾಜರಾಗಲಿದ್ದಾರೆ.
ಸುಬ್ರಹ್ಕಮಣ್ಯ ಎಸ್ಎಸ್ಪಿಯು ಕಾಲೇಜು ಪರೀಕ್ಷಾ ಕೇಂದ್ರದಲ್ಲಿ 498 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಸುಬ್ರಹ್ಮಣ್ಯ ಎಸ್ಎಸ್ಪಿಯು ಕಾಲೇಜು, ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜು, ಪಂಜ ಸರಕಾರಿ ಪದವಿ ಪೂರ್ವ ಕಾಲೆಜಿನ ವಿದ್ಯಾರ್ಥಿಗಳು ಇಲ್ಲಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆಗೆ ಎಲ್ಲಾ ಸಿದ್ಧತೆಗಳು ಪೂರ್ತಿಯಾಗಿದೆ ಎಂದು ಪರೀಕ್ಷಾ ಕೇಂದ್ರ ಕಾಲೇಜುಗಳ ಪ್ರಾಂಶುಪಾಲರುಗಳು ಮಾಹಿತಿ ನೀಡಿದ್ದಾರೆ.
ರಾಜ್ಯದಾದ್ಯಂತ ಸುಸೂತ್ರವಾಗಿ ಪರೀಕ್ಷೆಗಳನ್ನು ನಡೆಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ರಾಜ್ಯದಲ್ಲಿ
ಈ ಬಾರಿ 7,27,387 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ರಾಜ್ಯದ 1,109 ಕೇಂದ್ರಗಳಲ್ಲಿ.ಪರೀಕ್ಷೆ ನಡೆಯಲಿದೆ. ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳ ಸಾಗಣೆ, ಸಂಗ್ರಹಣೆ, ಮೌಲ್ಯಮಾಪನ ಕೇಂದ್ರಗಳ ಸುತ್ತ ಬಿಗಿ ಭದ್ರತೆ ಒದಗಿಸಲಾಗುತ್ತದೆ. ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ.