ಬೆಂಗಳೂರು:ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಸಿಸಿದ್ದಾರೆ.
ಬೆಂಗಳೂರು ಉತ್ತರ ತಾಲ್ಲೂಕಿನ ವ್ಯಾಪ್ತಿಯಲ್ಲಿ 200 ಹಾಸಿಗೆಯ ಅತ್ಯಾಧುನಿಕ ಮತ್ತು ಸುಸಜ್ಜಿತ ಆಸ್ಪತ್ರೆಯನ್ನು 150 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು.ಹೊಸದಾಗಿ ಘೋಷಣೆಯಾಗಿರುವ
ತಾಲ್ಲೂಕುಗಳಾದ ಹನೂರು, ಅಳ್ನಾವರ, ಅಣ್ಣಿಗೇರಿ, ಮಸ್ಕಿ, ಸಿರಿವಾರ, ಕಾಪು, ಬಬಲೇಶ್ವರ, ಕೊಲ್ಹಾರ, ಚೇಳೂರು, ತೇರದಾಳದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಿಸಲಾಗುವುದು. ಪೊನ್ನಂಪೇಟೆಯಲ್ಲಿ ಹೊಸದಾಗಿ ಸಮುದಾಯ ಆರೋಗ್ಯ ಕೇಂದ್ರವನ್ನು ಆರಂಭಿಸಲಾಗುವುದು.
ಮಾಲೂರು, ಮಾಗಡಿ, ಕುಶಾಲನಗರ, ಕೊರಟಗೆರೆ, ಜಗಳೂರು, ಸವಣೂರು, ರಾಮದುರ್ಗ ಮತ್ತು ಸವದತ್ತಿ ತಾಲ್ಲೂಕು ಮಟ್ಟದ ಆಸ್ಪತ್ರೆಗಳನ್ನು ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳನ್ನು ಒಟ್ಟು 650 ಕೋಟಿ ವೆಚ್ಚದಲ್ಲಿ ನವೀಕರಣ ಮಾಡಲಾಗುವುದು.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ 200 ಹಾಸಿಗೆ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು.
ಮೈಸೂರು ಜಿಲ್ಲೆಯ ತಗಡೂರು ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಘೋಷಿಸಲಾಗಿದೆ.