ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ನೀಡಿದ 4 ಭರವಸೆ ಮತ್ತು ರಾಜ್ಯದ ಸರಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆ ಈಡೇರಿಸಲು ಕ್ರಮಕೈಗೊಳ್ಳಲಿದೆ ಎಂದು ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿಳಿಸಿದ್ದಾರೆ. ಅವರು ಮಂಗಳೂರು ಅಡ್ಯಾರ್ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಎದುರಿನ ಮೈದಾನದಲ್ಲಿಂದು ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಿದ್ದರು. ದೇಶದಲ್ಲಿ ಬೆಲೆ ಏರಿಕೆ
ಮಿತಿ ಮೀರಿದೆ. ದೇಶದಲ್ಲಿ 40 ಕೋಟಿ ಜನ ಬಡತನ ರೇಖೆಗಿಂತ ಕೆಳಗಿಳಿದಿದ್ದಾರೆ. ಶೇ ಒಂದರಷ್ಟು ಜನರಲ್ಲಿ ಶೇ 40 ಸಂಪತ್ತು ಶೇಖರಣೆಯಾಗಿದೆ. 90ಲಕ್ಷ ಸಣ್ಣ ಕೈಗಾರಿಕೆಗಳು ಸಂಪೂರ್ಣ ಮುಚ್ಚಿದೆ. 1.4 ಲಕ್ಷ ಜನ ಉದ್ಯೋಗ ಕಳೆದುಕೊಂಡರು. ಇಂದಿರಾ ಗಾಂಧಿ ಮಂಗಳೂರು ವಿಮಾನ ನಿಲ್ದಾಣ, ಬಂದರು ಎಂಸಿಎಫ್ ನಂತಹ ಕಾರ್ಖಾನೆಯನ್ನು ಇಲ್ಲಿ ಸ್ಥಾಪನೆ ಮತ್ತು ಅಭಿವೃದ್ಧಿ ಮಾಡಿರುವುದು ನನಗೆ ಗೊತ್ತಿದೆ. ಇಲ್ಲಿನ ಬ್ಯಾಂಕ್ ಗಳನ್ನು ರಾಷ್ಟ್ರೀಕರಣ ಮಾಡಿ ಕೊಡುಗೆ ನೀಡಿದ್ದಾರೆ. ಇಂತಹ ಬ್ಯಾಂಕ್ ಗಳನ್ನು ಮೋದಿ ಸರಕಾರ ವಿಲೀನಗೊಳಿಸಿದೆ ಎಂದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ
ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ ಕೆಲಸ ಆಗ್ತಾ ಇಲ್ಲ. ಹೂಡಿಕೆ ಆಗ್ತಾ ಇಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರಾವಳಿಗೆ ಪ್ರತ್ಯೇಕವಾಗಿ ಬಜೆಟ್ ನಲ್ಲಿ ಯೋಜನೆ ರೂಪಿಸಲಿದೆ. ಕಾಂಗ್ರೆಸ್ ಗ್ಯಾರಂಟಿ ಕಾರ್ಯಕ್ರಮ ಅನುಷ್ಠಾನ ಮಾಡುವ ಭರವಸೆ ನೀಡುತ್ತೇವೆ ಎಂದು ತಿಳಿಸಿದ್ದಾರೆ.
ಸಮಾರಂಭದಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಶಾಸಕ ಯು.ಟಿ.ಖಾದರ್ ,ಬಿ.ಕೆ.ಹರಿಪ್ರಸಾದ್, ಮಂಜುನಾಥ ಭಂಡಾರಿ, ಮಾಜಿ ಮುಖ್ಯ ಮಂತ್ರಿ ಎಂ.ವೀರಪ್ಪ ಮೊಯ್ಲಿ, ಸಚಿವರಾದ ಅಭಯಚಂದ್ರ ಜೈನ್, ಎಐಸಿಸಿ ವಕ್ತಾರರಾದ ಕೆ.ಸಿ.ವೇಣುಗೋಪಾಲ, ಚರಣ್ ಸಿಂಗ್ ಸಪ್ರಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರೋಜಿ ಎಂ ಜೋನ್, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ಐವನ್ ಡಿ ಸೋಜ, ಮೊದಲಾದವರು ಉಪಸ್ಥಿತರಿದ್ದರು.