ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಗಾಳಿ–ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ. ಸೋಮವಾರದಿಂದ ನಾಲ್ಕು ದಿನಗಳು ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಸೋಮವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ.ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ಜಿಲ್ಲೆಯ ಕೆಲವೆಡೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಜೊತೆಗೆ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಸೋಮವಾರ 19 ಜಿಲ್ಲೆಗಳಿಗೆ, ಮಂಗಳವಾರ 26 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಸೂಚನೆ ನೀಡಿದೆ.