ಬೆಂಗಳೂರು:ರಾಜ್ಯದ ಹಲವು ಜಿಲ್ಲೆಗಳಲ್ಲಿ ನ.23ರಿಂದ ಮೂರು ದಿನ ವ್ಯಾಪಕವಾಗಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ತಮಿಳುನಾಡು, ಆಂಧ್ರಪ್ರದೇಶ, ಕೇರಳ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾರಿ ಮಳೆಯಾಗಲಿದ್ದು ಇದರ ಪರಿಣಾಮ
ಕರ್ನಾಟಕದಲ್ಲಿಯೂ ಮಳೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಬಳ್ಳಾರಿಯಲ್ಲಿ ನ.23ರಿಂದ ನ.25ರವರೆಗೆ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ನ.24, ನ.25ರಂದು ಹಾಗೂ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ವಿಜಯಪುರದಲ್ಲಿ ನ.25ರಂದು ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಹಿಂಗಾರು ಕ್ಷೀಣಗೊಂಡ ಪರಿಣಾಮ ಅ.1ರಿಂದ ನ.20ರವರೆಗೆ ವಾಡಿಕೆಗಿಂತ ಕಡಿಮೆ ಮಳೆ ಬಿದ್ದಿದೆ.