ಬೆಂಗಳೂರು: ರಾಜ್ಯದ ವಿವಿಧೆಡೆ ಶನಿವಾರದಿಂದ ನಾಲ್ಕು ದಿನಗಳು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಾವಣಗೆರೆ, ಚಿತ್ರದುರ್ಗ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗೆ ಶನಿವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾನುವಾರ ಮಳೆ ವ್ಯಾಪಿಸಿಕೊಳ್ಳುವ
ಸಂಭವವಿದ್ದು, 11 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಯ ಜತೆಗೆ ಮಂಡ್ಯ, ಹಾಸನ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಎರಡು ದಿನಗಳು ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಯ ಹಲವೆಡೆ ಇದೇ 10ರವರೆಗೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.