ಬೆಂಗಳೂರು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಸೋಮವಾರವೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿರುವ ಹವಾಮಾನ ಇಲಾಖೆಯು, 10 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ಆರು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಭಾನುವಾರ ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ
ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.ಬಾಗಲಕೋಟೆ, ಗದಗ, ದಾವಣಗೆರೆ, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ. ಕೆಲವೆಡೆ ಗಂಟೆಗೆ 40 ಕಿ.ಮೀ ನಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿಯ ಉದ್ದಕ್ಕೂ ತೀವ್ರ ಗಾಳಿಯ ಸಾಧ್ಯತೆಯಿದೆ. ಗಂಟೆಗೆ 35 ಕಿ.ಮೀ.ನಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಸಮುದ್ರದಲ್ಲಿ ಭಾರಿ ಅಲೆಗಳು ಕಾಣಿಸಿಕೊಳ್ಳಬಹುದು. ಆದ್ದರಿಂದ, ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರ ವಹಿಸಬೇಕು ಎಂದು ಇಲಾಖೆ ಹೇಳಿದೆ. ಮಂಗಳವಾರವೂ ರಾಜ್ಯದ 14 ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿರುವ ಇಲಾಖೆ, ಏಳು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.