ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಕೆಲವೆಡೆ ಭಾನುವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ, ಮುನ್ಸೂಚನೆ ನೀಡಿದೆ.ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ
ಸಾಧ್ಯತೆಯಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು ಮತ್ತು ಕೊಡಗು ಜಿಲ್ಲೆಯ ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಮೈಸೂರು ಹಾಗೂ ಕೊಡಗು ಜಿಲ್ಲೆಗೆ ಸೋಮವಾರ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಮಂಡ್ಯ, ರಾಮನಗರ ಹಾಗೂ ಚಾಮರಾಜನಗರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಮಂಗಳವಾರವೂ ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಈ ಮಧ್ಯೆ ಫೆಂಗಲ್ ಚಂಡಮಾರುತ ತಮಿಳುನಾಡಿನ ಕರಾವಳಿ ತೀರಕ್ಕೆ ಅಪ್ಪಳಿಸಿದ್ದು ತಮಿಳುನಾಡಿನಲ್ಲಿ ಭಾರೀ ಮಳೆಯಾಗಿದೆ.