ಬೆಂಗಳೂರು: ರಾಜ್ಯದ ವಿವಿಧೆಡೆ ಮುಂದಿನ ಕೆಲವು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 10ರವರೆಗೆ ರಾಜ್ಯದ ಕೆಲ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ ಹಾಗೂ
ಕೋಲಾರ ಜಿಲ್ಲೆಗೆ ಶುಕ್ರವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಜತೆಗೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಯಾದಗಿರಿ ಜಿಲ್ಲೆ ಸೇರಿದಂತೆ ಈ ಮೇಲಿನ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಜತೆಗೆ 30 ರಿಂದ 40 ಕಿ.ಮೀ. ಗಾಳಿ ಬೀಸುವ ಸಂಭವವಿದೆ ಎಂದು ಇಲಾಖೆ ಹೇಳಿದೆ. ಕರಾವಳಿಯಲ್ಲಿ ಶುಕ್ರವಾರ ಗಂಟೆಗೆ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.8ರಿಂದ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳು ಒಳನಾಡಿನಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನವು 2ರಿಂದ 3 ಡಿಗ್ರಿ ಸೆಲ್ಸಿಯಸ್ನಿಂದ ಕಡಿಮೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.