ಬೆಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ
ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ. ಜೂನ್ 14 ರಂದು, ದಕ್ಷಿಣ ಒಳನಾಡಿನ ಹಲವೆಡೆ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜೂನ್ 16ರವರೆಗೆ ಇದೇ ಪರಿಸ್ಥಿತಿ ಇರಲಿದೆ ಎಂದು ವರದಿಯಾಗಿದೆ. ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.