ಸುಳ್ಯ:ಮುಂಗಾರು ಮಳೆ ಕೆಲವು ದಿನಗಳಿಂದ ಬಿರುಸು ಪಡೆದುಕೊಂಡಿದ್ದು ಮಳೆಯ ಅಬ್ಬರ ಮುಂದುವರಿದಿದೆ. ಸುಳ್ಯ ತಾಲೂಕಿನಲ್ಲಿ ಶುಕ್ರವಾರ ಬೆಳಗ್ಗಿನಿಂದ ಉತ್ತಮ ಮಳೆಯಾಗಿದೆ.ರಾಜ್ಯದಲ್ಲಿ ಮುಂಗಾರು ಮಾರುತಗಳು ಮತ್ತಷ್ಟು ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ವಿವಿಧ ಭಾಗಗಳಲ್ಲಿ ಮುಂದಿನ 3 ದಿನಗಳಲ್ಲಿ
ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ.ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಮಳೆ ಆರ್ಭಟ ಮುಂದುವರಿಯಲಿದ್ದು, ಇಲ್ಲಿಯೂ ಕೂಡ ಭಾರಿ ಮಳೆಯಾಗುವ ಸಾಧ್ಯತೆಯಿದೆ.ಕರಾವಳಿ, ಮಲೆನಾಡು ಮಾತ್ರವಲ್ಲದೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮುಂಗಾರು ಮಳೆ ಚುರುಕಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆಯಿದೆ.









