ಮಂಗಳೂರು:ಕರ್ನಾಟಕದಾದ್ಯಂತ ಮುಂಗಾರು ಮತ್ತೆ ಚುರುಕುಗೊಂಡಿದೆ. ಕರಾವಳಿ ಜಿಲ್ಲೆಗಳು ಸೇರಿ ಮುಂದಿನ ನಾಲ್ಕು ದಿನಗಳ ಕಾಲ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ
ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಹಾಸನ, ವಿಜಯಪುರ, ಯಾದಗಿರಿ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಇನ್ನುಳಿದಂತೆ ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ ಎಂಬ ಸೂಚನೆ ಇದೆ. ಸುಳ್ಯ ತಾಲೂಕು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದೆ. ನದಿ, ಹಳ್ಳ,ಕೊಳ್ಳಗಳು ತುಂಬಿ ಹರಿಯುತಿದೆ. ಗುರುವಾರ ಹಗಲು ಹಾಗೂ ರಾತ್ರಿ ಕುಂಭದ್ರೋಣ ಮಳೆಯಾಗಿದೆ. ಶುಕ್ರವಾರವೂ ಮಳೆ ಮುಂದುವರಿಯುವ ಸೂಚನೆಯಿದೆ.












