ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ತೀವ್ರಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯದಾದ್ಯಂತ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ
ಹೆಚ್ಚಿರಲಿದೆ.ಮೈಸೂರು, ಚಾಮರಾಜನಗರ ಹಾಗೂ ರಾಮನಗರ,ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಭಾಗಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬಳ್ಳಾರಿ, ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲೂ ಗಾಳಿ ಸಹಿತ ಜಿಟಿಜಿಟಿ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ತೀರದ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಬಹುದು. ಇನ್ನು ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಹಗುರವಾದ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.







