ಸುಳ್ಯ:ಮುಂಗಾರು ಮಳೆ ಮತ್ತೆ ಚುರುಕುಗೊಂಡ ಲಕ್ಷಣ ಕಾಣಿಸುತ್ತಿದ್ದು ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಬುಧವಾರ ಸಾಧಾರಣ ಮಳೆಯಾಗಿದೆ. ದಿನಪೂರ್ತಿ ಕತ್ತಲು ಕವಿದು ಮಳೆಗಾಲದ ವಾತಾವರಣ ಕಂಡು ಬಂದಿತ್ತು.ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು ಮುಂದಿನ
ಒಂದು ವಾರಗಳ ಕಸಲ ಕಾಲ ವ್ಯಾಪಕ ಮಳೆಯಾಗಲಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.ಕರಾವಳಿ, ಮಲೆನಾಡು, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ವಿವಿಧೆಡೆ ಸಾಧಾರಣ ಮಳೆಯಾಗಲಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಜುಲೈ 23 ರ ನಂತರ ಉತ್ತರ ಕರ್ನಾಟಕದಲ್ಲಿ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿದ್ದರೂ, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ನಿರಂತರವಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.








