ಸುಳ್ಯ: ಸುಳ್ಯ ನಗರ ಸೇರಿದಂತೆ ಸುಳ್ಯ ಕಡಬ ತಾಲೂಕಿನ ವಿವಿಧ ಭಾಗಗಳಲ್ಲಿ ಭಾನುವಾರ ರಾತ್ರಿ ಧಾರಾಕಾರ ಮಳೆಯಾಗಿದೆ. ಏಳು ಗಂಟೆಯ ಬಳಿಕ ವಿವಿಧ ಕಡೆ ವಿವಿಧ ಕಡೆಗಳಲ್ಲಿ ಮಳೆ ಆರಂಭಗೊಂಡಿದೆ. ಗುಡುಗು ಸಿಡಿಲಿನ ಅಬ್ಬರದೊಂದಿಗೆ ಧಾರಾಕಾರ ಮಳೆಯಾಗಿದೆ. ಸುಳ್ಯ ನಗರದಲ್ಲಿ ಉತ್ತಮ ಮಳೆ ಸುರಿದಿದೆ.ರಾಜ್ಯದಲ್ಲಿ ಇದೇ 20ರಿಂದ ಐದು
ದಿನ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. 20ರಂದು ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದ್ದರೆ, ಅದೇ ದಿನ ಉತ್ತರ ಕನ್ನಡ, ಹಾವೇರಿ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಸೂಚನೆ ನೀಡಲಾಗಿದೆ.21ರಂದು ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ‘ಆರೆಂಜ್’ ಹಾಗೂ ಉತ್ತರ ಕನ್ನಡ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಸೂಚನೆ ನೀಡಲಾಗಿದೆ.ಇದೇ 22ರಂದು ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ‘ಆರೆಂಜ್’ ಹಾಗೂ ಕೊಡಗು, ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಸೂಚನೆ ಕೊಡಲಾಗಿದೆ.
ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಬಿರುಗಾಳಿಯು ಪ್ರತಿಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ. ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಕೋರಲಾಗಿದೆ. ಕರಾವಳಿ ಜಿಲ್ಲೆಗಳ ಸಮುದ್ರ ತೀರದಲ್ಲಿ ಪ್ರಕ್ಷುಬ್ಧ ವಾತಾವರಣ ಇರಲಿದೆ. ಅಲೆಗಳ ಅಬ್ಬರ ಇರಲಿದ್ದು, ಮೀನುಗಾರರು ಎಚ್ಚರಿಕೆ ವಹಿಸುವಂತೆಯೂ ಸೂಚನೆ ನೀಡಿದೆ.