ಸುಳ್ಯ:ಸುಳ್ಯದಲ್ಲಿ ಶುಕ್ರವಾರ ರಾತ್ರಿ ಉತ್ತಮ ಮಳೆಯಾಗಿದೆ.
ರಾತ್ರಿ 8.30ರ ಬಳಿಕ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಸುಳ್ಯ ನಗರ ಸೇರಿದಂತೆ ತಾಲೂಕಿನ ವಿವಿಧ ಕಡೆ ಮಳೆಯಾಗಿದೆ. ಬೆಳಗ್ಗಿನಿಂದ ಮೋಡ ಕವಿದ ವಾತಾವರಣ ಇತ್ತು ರಾತ್ರಿಯ ವೇಳೆಗೆ ಮಳೆ ಸುರಿದಿದೆ.
ಈ ಮಧ್ಯೆ ರಾಜ್ಯದ ವಿವಿಧ ಭಾಗಗಳಲ್ಲಿ ಶನಿವಾರ ಹಾಗೂ
ಭಾನುವಾರ ಸಹ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಶನಿವಾರ ಗುಡುಗು ಸಹಿತ ಮಳೆ ಆಗಲಿದೆ. ಈ ಜಿಲ್ಲೆಗಳಲ್ಲಿ ಗಾಳಿಯು ಪ್ರತಿಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ. ಉತ್ತರ ಕನ್ನಡ, ಹಾಸನ, ಮಂಡ್ಯ, ದಾವಣಗೆರೆ ಜಿಲ್ಲೆಯ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ನಗರ– ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರದಲ್ಲಿ ಸಾಧಾರಣಕ್ಕಿಂತ ಕಡಿಮೆ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ ಜಿಲ್ಲೆಗಳಲ್ಲಿ ಭಾನುವಾರ ಉತ್ತಮ ಮಳೆಯಾಗಲಿದೆ. ಗಾಳಿಯು ಪ್ರತಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಸೂಚನೆ ನೀಡಿದೆ.









