ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಉಚಿತ ಕುಡಿಯುವ ನೀರು ಮತ್ತು ವಿದ್ಯುತ್ ಪೂರೈಕೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ 68ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ
ಘೋಷವ್ಯಾಕ್ಯದಡಿಯಲ್ಲಿ ಇಡೀ ವರ್ಷ ಸ್ವಾಭಿಮಾನಿ ಕನ್ನಡ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.
‘ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಸೌಕರ್ಯಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ’ ಎಂದರು.ಕೇಂದ್ರ ಸರ್ಕಾರದ ಉದ್ಯೋಗಗಳಿಗೆ ಇಂಗ್ಲೀಷ್ ಮತ್ತು ಹಿಂದಿ ಭಾಷೆಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಇದರಿಂದ ರಾಜ್ಯದ ಅಭ್ಯರ್ಥಿಗಳು ಕೇಂದ್ರದ ಉದ್ಯೋಗಗಳಿಂದ ವಂಚಿತರಾಗುತ್ತಿದ್ದಾರೆ. ಈ ಪರೀಕ್ಷೆಗಳನ್ನು ಕನ್ನಡದಲ್ಲೇ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ’ ಎಂದು ತಿಳಿಸಿದರು.‘ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಎಲ್ಲ ಭಾಷೆಗಳಿಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಭಾಷೆ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಡ್ಡಾಯವಾಗಿ ಪಾಲಿಸಬೇಕು’ ಎಂದು ಸಿದ್ದರಾಮಯ್ಯ ಹೇಳಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಶಾಸಕರಾದ ಆರ್.ವಿ. ದೇಶಪಾಂಡೆ, ರಿಜ್ವಾನ್ ಹರ್ಷದ್, ಎನ್.ಎ. ಹ್ಯಾರಿಸ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಇದ್ದರು.