ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 26 ವರ್ಷಗಳ ಬಳಿಕ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆಯಾಗಿದ್ದಾರೆ.
ಕೇಂದ್ರ ವೀಕ್ಷಕರಾದ ರವಿಶಂಕರ್ ಪ್ರಸಾದ್ ಮತ್ತು ಓಂ ಪ್ರಕಾಶ್ ಧನಕರ್ ಸಮ್ಮುಖದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು
ನಾಯಕರನ್ನಾಗಿ ಆಯ್ಕೆ ಮಾಡಲಾಯಿತು.ದೆಹಲಿಯ ರಾಮಲೀಲಾ ಮೈದಾನದಲ್ಲಿ ನಾಳೆ (ಗುರುವಾರ) ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ನಡೆದ ಚುನಾವಣೆಯಲ್ಲಿ 48 ಕ್ಷೇತ್ರಗಳನ್ನು ಗೆದ್ದು ಬಿಜೆಪಿ 26 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಎಎಪಿ 22 ಸ್ಥಾನಗಳಲ್ಲಿ ಗೆದ್ದರೆ ಕಾಂಗ್ರೆಸ್ಗೆ ಒಂದೇ ಒಂದು ಸ್ಥಾನ ದೊರಕಿರಲಿಲ್ಲ.
ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ಗೆಲುವು ಸಾಧಿಸಿದ ಪರ್ವೇಶ್ ವರ್ಮಾ ಉಪ ಮುಖ್ಯಮಂತ್ರಿಯಾಗಲಿದ್ದಾರೆ.