ಕೋಲ್ಕತ್ತ:ಬಂಗಾಳಕೊಲ್ಲಿಯಲ್ಲಿ ಚಂಡಮಾರುತವು ಸೃಷ್ಟಿಯಾಗುತ್ತಿದ್ದು ಭಾನುವಾರದ (ಮೇ 26) ವೇಳೆಗೆ ತೀವ್ರ ಚಂಡಮಾರುತವಾಗಿ ಪಶ್ಚಿಮ ಬಂಗಾಳ ಕರಾವಳಿ ಮತ್ತು ಪಕ್ಕದ ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಗುರುವಾರ ತಿಳಿಸಿದೆ. ಪ್ರಸಕ್ತ ಸಾಲಿನ ಮುಂಗಾರು ಪೂರ್ವದಲ್ಲಿ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ
ಮೊದಲ ಚಂಡಮಾರುತ ಇದಾಗಿದ್ದು, ಇದಕ್ಕೆ ‘ರೆಮಲ್’ ಎಂದು ಹೆಸರಿಸಲಾಗಿದೆ. ಇದರ ಪರಿಣಾಮ ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳಾದ ಉತ್ತರ 24 ಪರಗಣ, ದಕ್ಷಿಣ 24 ಪರಗಣ ಮತ್ತು ಪುರ್ಬಾ ಮೇದಿಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ಬಂಗಾಳಕೊಲ್ಲಿಯಲ್ಲಿ ಒತ್ತಡದ ತಗ್ಗಿದ ಪರಿಣಾಮ ಶುಕ್ರವಾರ ವಾಯುಭಾರ ಕುಸಿತವಾಗುವ ಸಾಧ್ಯತೆಯಿದೆ. ಮರುದಿನ ಪೂರ್ವ-ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತವಾಗಿ ಪರಿಣಮಿಸುವ ಸಾಧ್ಯತೆಯಿದೆ. ಇದು ಭಾನುವಾರ ಸಂಜೆ ವೇಳೆಗೆ ತೀವ್ರ ಚಂಡಮಾರುತವಾಗಿ ಪಶ್ಚಿಮ ಬಂಗಾಳ ಮತ್ತು ಪಕ್ಕದ ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾನುವಾರದವರೆಗೆ ಉತ್ತರ ಬಂಗಾಳಕೊಲ್ಲಿಗೆ ತೆರಳದಂತೆ ಹವಾಮಾನ ಇಲಾಖೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ. ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಭಾರತೀಯ ಹವಾಮಾನ ಇಲಾಖೆ ಸಲಹೆಯನ್ನು ನೀಡಿದೆ.
ಒಡಿಶಾ ಮತ್ತು ಪಶ್ಚಿಮ ಬಂಗಾಳದ ಉತ್ತರ ಭಾಗದ ಕರಾವಳಿಯುದ್ದಕ್ಕೂ, ಭಾರೀ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆ ಇದೆ. ಒಡಿಶಾ ಅಲ್ಲದೆ, ಚಂಡಮಾರುತವು ಮೇ 23 ಮತ್ತು ಮೇ 27 ರ ನಡುವೆ ಮಹಾರಾಷ್ಟ್ರ ಮತ್ತು ಗುಜರಾತ್ನ ಮೇಲೂ ಪರಿಣಾಮ ಬೀರುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ಮೇ 28ರ ಸುಮಾರಿಗೆ ಗುಜರಾತ್ ಮತ್ತು ಮುಂಬೈನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಇತರ ರಾಜ್ಯಗಳಲ್ಲಿ ಮೇ 23 ರವರೆಗೆ ಅಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ, ಪುದುಚೇರಿ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಲಕ್ಷದ್ವೀಪ ಮತ್ತು ತೆಲಂಗಾಣದಲ್ಲಿ ಮೇ 23 ರವರೆಗೆ ಹಗುರದಿಂದ ಸಾಧಾರಣ ಮಳೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ.