ಜೈಪುರ: ರಾಜಸ್ಥಾನ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ ಅವರು ಗುಜರಾತ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಇದು ಐಪಿಎಲ್ ನಲ್ಲಿ ಎರಡನೇ ಅತಿ ವೇಗದ ಶತಕ ಮತ್ತು ಟಿ20 ಕ್ರಿಕೆಟ್ ನಲ್ಲಿ ಅತಿ ವೇಗದ ಶತಕ ಸಾಧಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. 7 ಬೌಂಡರಿ ಮತ್ತು 11 ಭರ್ಜರಿ ಸಿಕ್ಸರ್ಗಳನ್ನು ಸಿಡಿಸಿದ ಅವರು
101 ರನ್ ಗಳಿಸಿ ತಮ್ಮ ಅದ್ಭುತ ಆಟವನ್ನು ಪ್ರದರ್ಶಿಸಿದರು. ಸೂರ್ಯವಂಶಿ ಅವರ ಶತಕ ಹಾಗೂ ಯಶಸ್ವಿ ಜೈಸ್ವಾಲ್ ಅವರ ಅರ್ಧ ಶತಕದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡ ಗುಜರಾತ್ ಟೈಟನ್ಸ್ ವಿರುದ್ಧ 8 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿದೆ. ಮೊದಲು ಬ್ಯಾಟ್ ಮಾಡಿದ ಗುಜರಾತ್ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 209 ರನ್ಗಳ ಬೃಹತ್ ಮೊತ್ತ ಪೇರಿಸಿತು. ಗುರಿ ಬೆನ್ನಟ್ಟಿದ ರಾಜಸ್ಥಾನ 15.5 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿ ಗೆಲುವಿನ ಕೇಕೆ ಹಾಕಿತು. ವೈಭವ್ ಮತ್ತು ಜೈಸ್ವಾಲ್ ಮೊದಲ ವಿಕೆಟ್ಗೆ 11.5 ಓವರ್ಗಳಲ್ಲಿ 166 ರನ್ ಗಳಿಸಿ ದಾಖಲೆ ಬರೆದರು.
ವೈಭವ್ ಐಪಿಎಲ್ ಇತಿಹಾಸದಲ್ಲಿ ಎರಡನೇ ಅತಿ ವೇಗದ ಶತಕ ಸಿಡಿಸಿದ ಆಟಗಾರ ಎನಿಸಿಕೊಂಡರು. ಇದು ಮಾತ್ರವಲ್ಲದೆ ಐಪಿಎಲ್ ಹಾಗೂ ಟಿ20 ಕ್ರಿಕೆಟ್ನಲ್ಲಿ ಅತಿ ವೇಗದ ಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ವಿಶ್ವ ದಾಖಲೆಗೂ ವೈಭವ್ ಕೊರಳೊಡ್ಡಿದರು. ಇಷ್ಟೇ ಅಲ್ಲದೆ ಕೇವಲ 14 ವರ್ಷ 32 ದಿನಗಳ ವಯಸ್ಸಿನಲ್ಲಿ ಈ ಐತಿಹಾಸಿಕ ಇನ್ನಿಂಗ್ಸ್ ಆಡಿದ ವೈಭವ್ ಕ್ರಿಕೆಟ್ ಇತಿಹಾಸದಲ್ಲಿ ಯಾವುದೇ ಸ್ವರೂಪದಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
265.78 ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿದ ಅವರು ಐಪಿಎಲ್ನಲ್ಲಿ ಅತಿ ವೇಗದ ಶತಕ ಸಿಡಿಸಿದ ಭಾರತೀಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮೊದಲು ಈ ದಾಖಲೆ ಯೂಸುಫ್ ಪಠಾಣ್ ಹೆಸರಿನಲ್ಲಿತ್ತು. ಅವರು 2010 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುವಾಗ ಈ ಶತಕ ಬಾರಿಸಿದ್ದರು.
ವೈಭವ್ ಸೂರ್ಯವಂಶಿ ಐಪಿಎಲ್ ಇನ್ನಿಂಗ್ಸ್ನಲ್ಲಿ ಅತಿ ಹೆಚ್ಚು ಸಿಕ್ಸರ್ಗಳನ್ನು ಬಾರಿಸಿದ ಭಾರತೀಯ ಬ್ಯಾಟ್ಸ್ಮನ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಇದಕ್ಕೂ ಮೊದಲು, ಮುರಳಿ ವಿಜಯ್ 2010 ರ ಐಪಿಎಲ್ನಲ್ಲಿ ಇನ್ನಿಂಗ್ಸ್ನಲ್ಲಿ 11 ಸಿಕ್ಸರ್ಗಳನ್ನು ಬಾರಿಸಿದ್ದರು. ಕೇಲ 17 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಈ ಸೀಸನ್ನ ಅತಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಬರೆದಿದ ಅವರು ಅದೇ ವೇಗದಲ್ಲಿ ಶತಕದೆಡೆಗೆ ಮುನ್ನುಗ್ಗಿದರು.
ಈ ಪಂದ್ಯದ ಆರಂಭದಿಂದಲೂ ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಕೇವಲ 17 ಎಸೆತಗಳಲ್ಲಿ 50 ರನ್ ಪೂರೈಸಿದರು. ಅವರ ಈ ಅರ್ಧಶತಕದ ಇನ್ನಿಂಗ್ಸ್ನಲ್ಲಿ 3 ಬೌಂಡರಿ ಮತ್ತು 6 ಸಿಕ್ಸರ್ಗಳು ಸೇರಿದ್ದವು. ಯಶಸ್ವಿ ಜೈಸ್ವಾಲ್ 40 ಎಸೆತಗಳಲ್ಲಿ9 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ ಅಜೇಯ 70 ರನ್ ಬಾರಿಸಿದರು. ರಿಯಾನ್ ಪರಾಗ್ 15 ಎಸೆತಗಳಲ್ಲಿ ತಲಾ 2 ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ ಅಜೇಯ 32 ರನ್ ಬಾರಿಸಿದರು.
ಮೊದಲು ಬ್ಯಾಟ್ ಮಾಡಿದ ಗುಜರಾತ್ ಪರ ಶುಭ್ಮನ್ ಗಿಲ್ ಹಾಗೂ ಜೋಸ್ ಬಟ್ಲರ್ ಅರ್ಧ ಶತಕ ಸಿಡಿಸಿದರು. ಗಿಲ್ 50 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ ಅಜೇಯ 84 ರನ್ ಬಾರಿಸಿದರು. ಜೋಸ್ ಬಟ್ಲರ್ 26 ಎಸೆತಗಳಲ್ಲಿ 3 ಬೌಂಡರಿ,ಸ ಹಾಗೂ 4 ಸಿಕ್ಸರ್ ನೆರವಿನಿಂದ ಅಜೇಯ 50 ರನ್ ಗಳಿಸಿದರು.ಸಾಯ್ ಸುದರ್ಶನ್ 39 ರನ್ ಗಳಿಸಿದರು.





