ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾಗದಲ್ಲಿ ಸಹಕಾರ ಕ್ಷೇತ್ರ ಗಟ್ಟಿಯಾಗಿದೆ. ಸಹಕಾರ ಕ್ಷೇತ್ರ ಸಹಸ್ರಾರು ಜನರಿಗೆ ಉದ್ಯೋಗವಕಾಶ ಕಲ್ಪಿಸುವುದರ ಜೊತೆಗೆ ಕೋಟ್ಯಂತರ ಜನರಿಗೆ ಸಾಕಷ್ಟು ಅನುಕೂಲ ಕಲ್ಪಿಸಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ-2022 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಹಕಾರ ಕ್ಷೇತ್ರ ಮುಂಚೂಣಿಯಲ್ಲಿದೆ. ಭಾರತದಲ್ಲಿ ಕರ್ನಾಟಕ ಎರಡನೇ ಮುಂಚೂಣಿ ರಾಜ್ಯವಾಗಿರುವುದು ನಮ್ಮೆಲ್ಲರ ಹೆಮ್ಮೆ. ಠೇವಣಿದಾರರ ವಿಶ್ವಾಸ ಉಳಿಸಿಕೊಂಡು ಉತ್ತಮ ರೀತಿಯಲ್ಲಿ ಕಾರ್ಯ

ನಿರ್ವಹಿಸಲಾಗುತ್ತಿದೆ ಎಂದು ಹೇಳಿದರು. 3 ಲಕ್ಷ ಹೊಸ ರೈತರು ಸೇರಿದಂತೆ 33 ಲಕ್ಷ ರೈತರಿಗೆ 24 ಸಾವಿರ ಕೋಟಿ ರೂ. ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ಈ ವರ್ಷ ವಿತರಣೆ ಮಾಡಲಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಸಾಲ ವಿತರಣೆ ಪ್ರಮಾಣ ಹೆಚ್ಚಳ ಮಾಡಲಾಗುತ್ತಿದೆ ಎಂದರು.
ಸಹಕಾರಿಗಳ ಬೇಡಿಕೆಯಂತೆ ಯಶಸ್ವಿನಿ ಯೋಜನೆಯನ್ನು ಮರುಜಾರಿ ಮಾಡಲಾಗುತ್ತಿದೆ.ರಾಜ್ಯದಲ್ಲಿ 15 ಹಾಲು ಒಕ್ಕೂಟಗಳಿದ್ದು, ಸುಮಾರು 25 ಲಕ್ಷಕ್ಕೂ ಅಧಿಕ ರೈತರು ಹಾಲು ಪೂರೈಕೆ ಮಾಡುತ್ತಿದ್ದಾರೆ. ಹಾಲು ಪೂರೈಸುವ ರೈತರಿಗೆ ಆರ್ಥಿಕವಾಗಿ ಅನುಕೂಲ ಕಲ್ಪಿಸಲು ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ ಮಾಡಲಾಗುತ್ತಿದೆ. ಬ್ಯಾಂಕ್ ಸ್ಥಾಪನೆ ಸಂಬಂಧ ನ.25ಕ್ಕೆ ಆರ್ ಬಿಐ ಜೊತೆಗೆ ಸಭೆ ನಿಗದಿಯಾಗಿದ್ದು, ಇದಕ್ಕೆ ಚಾಲನೆ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರ ಮಾರಾಟ ಮಂಡಳಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಎಂ.ಎನ್. ರಾಜೇಂದ್ರ ಕುಮಾರ್, ಶಾಸಕರಾದ ವೇದವ್ಯಾಸ ಡಿ. ಕಾಮತ್,ಯು.ಟಿ.ಖಾದರ್, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೂಡ್ಗಿ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ಕೆ.ಪಿ.ಸುಚರಿತ ಶೆಟ್ಟಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಯಶ್ ಪಾಲ್ ಎ.ಸುವರ್ಣ, ಸಹಕಾರ ಸಂಘಗಳ ನಿಬಂಧಕರಾದ ಕ್ಯಾಪ್ಟನ್ ಡಾ. ಕೆ.ರಾಜೇಂದ್ರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.