ಸುಳ್ಯ: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಯುವತಿಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಯುವಕನ ಮೇಲೆ ತಂಡ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಸಂಘ ಪರಿವಾರ ಸಂಘಟನೆಯ ಕಾರ್ಯಕರ್ತರನ್ನು ಬಂಧಿಸಿರುವುದನ್ನು ವಿರೋಧಿಸಿ ಸಂಘ ಪರಿವಾರ ಸಂಘಟನೆಗಳ ಕಾರ್ಯಕರ್ತರು ಸುಳ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಮುಖ್ಯ ರಸ್ತೆಯಲ್ಲಿ ಸೆ.24ರಂದು ಪ್ರತಿಭಟನೆ ನಡೆಸಿದರು. ಬೆಳಿಗ್ಗೆ
ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮೆರವಣಿಗೆ ಮೂಲಕ ನೂರಾರು ಮಂದಿ ಪ್ರತಿಭಟನಾಕಾರರು ಪೋಲೀಸ್ ಠಾಣೆಯ ಮುಂಭಾಗಕ್ಕೆ ಬಂದು ಪ್ರತಿಭಟನೆ ನಡೆಸಿದರು.
ಶಾಸಕಿ ಭಾಗೀರಥಿ ಮುರುಳ್ಯ, ಮುಖಂಡರಾದ ಹರೀಶ್ ಕಂಜಿಪಿಲಿ, ಎ.ವಿ.ತೀರ್ಥರಾಮ, ನವೀನ್ ನೆರಿಯ ಮತ್ತಿತರರು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ವಿಶ್ವಹಿಂದೂ ಪರಿಷದ್ ಸುಳ್ಯ ಪ್ರಖಂಡದ ಅಧ್ಯಕ್ಷ ಸೋಮಶೇಖರ ಪೈಕ, ಬಜರಂಗದಳ ಸಂಚಾಲಕ ಹರಿಪ್ರಸಾದ್ಎಲಿಮಲೆ, ಬಿಜೆಪಿ ಹಾಗೂ ಸಂಘ ಪರಿವಾರ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.