ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ರಹೀಂ ಎಂಬ ಯುವಕನ ಕೊಲೆಯ ಬಳಿಕ ಜಿಲ್ಲೆಯಲ್ಲಿ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಇದೇ 30ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ
ಪ್ರಭಾರ ಜಿಲ್ಲಾಧಿಕಾರಿ ಆನಂದ ಕೆ. ಆದೇಶ ಮಾಡಿದ್ದಾರೆ. ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸುವ ಸಲುವಾಗಿ, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯವರ ಸಲಹೆ ಮೇರೆಗೆ ಭಾರತೀಯ ನ್ಯಾಯ ಸುರಕ್ಷಾ ಸಂಹಿತೆಯ ಸೆಕ್ಷನ್ 163ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಂಟ್ವಾಳ, ಪುತ್ತೂರು, ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.