ಬೆಂಗಳೂರು: ಸರಕಾರದ ಐದು ‘ಗ್ಯಾರಂಟಿ’ಗಳ ಪೈಕಿ, ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ ಯೋಜನೆ ‘ಶಕ್ತಿ’ಗೆ ರಾಜ್ಯದಾದ್ಯಂತ ಸರ್ಕಾರ ಭಾನುವಾರ (ಜೂನ್ 11) ಚಾಲನೆ ನೀಡಲಿದೆ.
ವಿಧಾನಸೌಧದ ಮುಂಭಾಗದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 1.00 ಗಂಟೆಯ ನಂತರ ಎಲ್ಲ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ಈ ಸೌಲಭ್ಯ ಸಿಗಲಿದೆ.
ಇದೇ ಸಂದರ್ಭದಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸ್ಥಳೀಯ ಶಾಸಕರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಮಂಗಳೂರಿನ ಬಿಜೈ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ 12.30ಕ್ಕೆ ಚಾಲನೆ ನೀಡುವರು. ಸುಳ್ಯ ಬಸ್ ನಿಲ್ದಾಣದಲ್ಲಿ ಮಧ್ಯಾಹ್ನ 12.30ಕ್ಕೆ ನಡೆಯುವ ಸಮಾರಂಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಚಾಲನೆ ನೀಡಲಿದ್ದಾರೆ.