ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ದೆಹಲಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಎಐಸಿಸಿ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ
ಮಾತುಕತೆ ನಡೆಸಿದರು. ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುತ್ತಿರುವುದು ಇದೇ ಮೊದಲು.ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹೈಕಮಾಂಡ್ ನಾಯಕರೊಂದಿಗೆ ಸರಣಿ ಮಾತುಕತೆ ನಡೆಸಿದ್ದಾರೆ. ಶುಕ್ರವಾರ ಸಚಿವ ಸಂಪುಟಕ್ಕೆ ಸೇರುವವರ ಪಟ್ಟಿ ಅಂತಿಮವಾಗಲಿದ್ದು, ಶನಿವಾರ ನೂತನ ಸಚಿವರ ಪದಗ್ರಹಣ ನಡೆಯಲಿದೆ.