ಬೆಂಗಳೂರು: ರಾಜ್ಯದ ಸಾವಿರಾರು ಬಡಜನರಿಗೆ ಕೈಗೆಟಕುವ ದರದಲ್ಲಿ ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ನೀಡುವ ಕಿದ್ವಾಯಿ ಸಂಸ್ಥೆಯು ಸುವರ್ಣ ಮಹೋತ್ಸವದ ಹೊಸ್ತಿಲಿನಲ್ಲಿದೆ. ಈ ಸಂದರ್ಭದಲ್ಲಿ ಆಸ್ಪತ್ರೆಯ ಕಲಬುರಗಿ ಮತ್ತು ಮೈಸೂರಿನಲ್ಲಿರುವ ಪ್ರಾದೇಶಿಕ ಘಟಕಗಳಲ್ಲಿ ಸೌಲಭ್ಯಗಳ ಸುಧಾರಣೆಗೆ 20 ಕೋಟಿ ರೂ. ಒದಗಿಸಲಾಗುವುದು. ರಾಜ್ಯದಲ್ಲಿ ಈಗಾಗಲೇ ಆರಂಭಿಸಲಾಗಿರುವ ವೈದ್ಯಕೀಯ ಕಾಲೇಜು ಮತ್ತು
ಆಸ್ಪತ್ರೆಗಳ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ 450 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಗದಗ, ಕೊಪ್ಪಳ, ಕಾರವಾರ ಮತ್ತು ಕೊಡಗು ಜಿಲ್ಲೆಗಳಲ್ಲಿ 450 ಬೆಡ್ ಆಸ್ಪತ್ರೆಗಳ ನಿರ್ಮಾಣ ಕಾರ್ಯವನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲಾಗುವುದು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಘೋಷಿಸಿದರು.
ಮೈಸೂರು, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಕಾರ್ಯಾರಂಭ ಹಾಗೂ ಸುಟ್ಟ ಗಾಯಗಳ ಘಟಕ ಸ್ಥಾಪನೆಗೆ 155 ಕೋಟಿ ರೂ.ಗಳನ್ನು ಒದಗಿಸಲಾಗುವುದು. NIMHANS ಸಂಸ್ಥೆಯ ಆವರಣದಲ್ಲಿ 146 ಕೋಟಿ ರೂ.ಗಳ ವೆಚ್ಚದಲ್ಲಿ ಅಂಗಾಂಗ ಜೋಡಣೆಗೆ ಮೀಸಲಾದ ದೇಶದ ಪ್ರಥಮ ಸಾರ್ವಜನಿಕ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು. ಜೊತೆಯಲ್ಲಿ ನಾನ್ ಆಲ್ಕೋಹಾಲಿಕ್ ಫ್ಯಾಟಿ ಲಿವರ್ ಖಾಯಿಲೆಯ ರೋಗಿಗಳಲ್ಲಿ ಸಿರೋಸಿಸ್ ಮತ್ತು ಕ್ಯಾನ್ಸರ್ ಪತ್ತೆ ಹಚ್ಚಲು ಒಂದು FibroScan ಅನ್ನು ಒದಗಿಸಲಾಗುವುದು ಎಂದರು.
ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (GIMS) 200 ಹಾಸಿಗೆಯ ಹೊಸ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು 70 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ, ದಾವಣಗೆರೆ, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯಗಳು, ಸಂಶೋಧನಾ ಕೇಂದ್ರ ಮತ್ತು ಒಳಾಂಗಣ ಕ್ರೀಡಾ ಸೌಲಭ್ಯಗಳನ್ನು ಹಾಗೂ ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜುಗಳನ್ನು ಸ್ಥಾಪಿಸಲಾಗುವುದು. ಮೈಸೂರು ಮತ್ತು ಕಲಬುರಗಿಯಲ್ಲಿ ಟ್ರಾಮಾ ಕೇರ್ ಸೆಂಟರ್ಗಳ ಕಾರ್ಯಾಚರಣೆಗೆ 30 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದರು.
ರಾಜ್ಯದ ಸಾವಿರಾರು ಬಡಜನರಿಗೆ ಕೈಗೆಟಕುವ ದರದಲ್ಲಿ ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ನೀಡುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಸುವರ್ಣ ಮಹೋತ್ಸವದ ಹೊಸ್ತಿಲಿನಲ್ಲಿದೆ. ಈ ಸಂದರ್ಭದಲ್ಲಿ ಆಸ್ಪತ್ರೆಯ ಕಲಬುರಗಿ ಮತ್ತು ಮೈಸೂರಿನಲ್ಲಿರುವ ಪ್ರಾದೇಶಿಕ ಘಟಕಗಳಲ್ಲಿ ಸೌಲಭ್ಯಗಳ ಸುಧಾರಣೆಗೆ 20 ಕೋಟಿ ರೂ. ಒದಗಿಸಲಾಗುವುದು.
ಚಿತ್ರದುರ್ಗದ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಎಲ್ಲಾ ಪೂರ್ವ ಸಿದ್ಧತೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ.
ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸಂಪೂರ್ಣ ಸ್ವಯಂಚಾಲಿತ ಮತ್ತು ಕೇಂದ್ರೀಕೃತ ರಕ್ತನಿಧಿ ನಿರ್ವಹಣಾ ವ್ಯವಸ್ಥೆಯನ್ನು ಐದು ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸ್ಥಳೀಯ ಆಡಳಿತವನ್ನು ಬಲಪಡಿಸಲು ಪ್ರತಿ ತಾಲ್ಲೂಕಿನಲ್ಲಿ ಒಬ್ಬ ನುರಿತ ಯುವ ಪದವೀಧರರನ್ನು 24 ತಿಂಗಳು ಅವಧಿಗೆ ‘ಮುಖ್ಯಮಂತ್ರಿಗಳ ಫೆಲೋಶಿಪ್’ಗೆ ಆಯ್ಕೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ‘ಮುಖ್ಯಮಂತ್ರಿಗಳ ಫೆಲೋಶಿಪ್ ಕಾರ್ಯಕ್ರಮಕ್ಕಾಗಿ 10 ಕೋಟಿ ಅನುದಾನ ಒದಗಿಸಲಾಗುವುದು’ ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 400 ಸಮುದಾಯ ಶೌಚಾಲಯ ಸಂಕೀರ್ಣಗಳನ್ನು ತಲಾ 25 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವುದು. ಇವುಗಳ ಕಾರ್ಯಾಚರಣೆ ಮತ್ತು ನಿರ್ವಹಣೆಗೆ ಸೂಕ್ತ ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ 100 ಕೋಟಿ ಒದಗಿಸಲಾಗುವುದು’ ಎಂದು ಹೇಳಿದರು.
ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತ ಯುವಜನರಿಗೆ ಕೌಶಲ ತರಬೇತಿಯನ್ನು 4 ಕೋಟಿ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಸಣ್ಣ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ರಾಜ್ಯದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯದ ಏಳು ಸ್ಥಳಗಳ ಕಲಬುರಗಿ ಜಿಲ್ಲೆಯ ಚಿತ್ತಾಪುರ, ಯಾದಗಿರಿಯ ಶಾಹಾಪುರ ತಾಲ್ಲೂಕಿನಲ್ಲಿಯೂ ಹೊಸ ಕೈಗಾರಿಕಾ ವಸಾಹತುಗಳನ್ನು ಹಂತ ಹಂತವಾಗಿ ಸ್ಥಾಪಿಸಲಾಗುವುದು’ ಎಂದು ಸಿದ್ದರಾಮಯ್ಯ ಅವರು ಘೋಷಿಸಿದರು.
ಅಲ್ಪಸಂಖ್ಯಾತ ಸಂಖ್ಯಾತ ವಿದ್ಯಾರ್ಥಿಗಳ ವ್ಯಾಸಂಗಕ್ಕಾಗಿ ಶೈಕ್ಷಣಿಕ ಸಾಲ ಯೋಜನೆ ಅಡಿಯಲ್ಲಿ 28 ವೃತ್ತಿಪರ ಕೋರ್ಸ್ ವ್ಯಾಸಂಗ ಮಾಡಲು ಶೇ 2 ಬಡ್ಡಿ ದರದಲ್ಲಿ ಸಾಲ.
ಇಂದಿರಾ ಕ್ಯಾಂಟೀನ್ ಪುನರಾಭಕ್ಕೆ ನಿರ್ಧಾರ
ಪ್ರಸಕ್ತ ಸಾಲಿನಲ್ಲಿ ಇಂದಿರಾ ಕ್ಯಾಂಟೀನ್ ದುರಸ್ತಿ ನವೀಕರಣ ಹಾಗೂ ನಿರ್ವಹಣೆಗೆ 100 ಕೋಟಿ ಮೀಸಲು.
ಬೆಂಗಳೂರುಮೂಲಸೌಕರ್ಯಕ್ಕೆ 12 ಸಾವಿರ ಕೋಟಿ
ನಮ್ಮ ಮೆಟ್ರೊಗೆ 30ಸಾವಿರ ಕೋಟಿ ಅನುದಾನ.
ಐದು ಗ್ಯಾರಂಟಿ ಯೋಜನೆಗಳಿಗೆ 52,000 ಕೋಟಿ. ರೂ.
ಅಬಕಾರಿ ತೆರಿಗೆ ಶೇ. 20 ಹೆಚ್ಚಳ
ಅನುಗ್ರಹ ಯೋಜನೆ ಮರುಜಾರಿ: ಹಸು, ಎತ್ತು, ಎಮ್ಮೆ, ಮೃತಪಟ್ಟರೆ 10,000 ರೂ.ಪರಿಹಾರ. ಡಾ. ಪುನೀತ್ ರಾಜ್ಕುಮಾರ್ ಅವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು.
ಏಕಬಳಕೆಯ ಡಯಾಲೈಸರ್ಗಳನ್ನು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸುವ ಮೂಲಕ ಸೇವೆಯ ಗುಣಮಟ್ಟ ಸುಧಾರಣೆಗೆ ಕ್ರಮ.
ರಾಜ್ಯದಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ 173 ಡಯಾಲಿಸಿಸ್ ಕೇಂದ್ರಗಳನ್ನು 219ಕ್ಕೆ ಹೆಚ್ಚಿಸಲಾಗುವುದು.
ಇದರೊಂದಿಗೆ ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟು 92 ಕೋಟಿ ರೂ. ಗಳನ್ನು ಒದಗಿಸಲಾಗುವುದು.
ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ಈಗಾಗಲೇ 23 PHC ಗಳನ್ನು CHC ಗಳಾಗಿ ಮೇಲ್ದರ್ಜೆಗೇರಿಸಲಾಗಿದೆ. ಈ CHC ಗಳನ್ನು ಕಾರ್ಯಗತಗೊಳಿಸಲು ಬೇಕಿರುವ ಅಗತ್ಯ ಉಪಕರಣಗಳು ಮತ್ತು ಮಾನವ ಸಂಪನ್ಮೂಲಗಳನ್ನು ಒದಗಿಸಲು 70 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಸಿಎಂ ತಿಳಿಸಿದರು.
ʻಆಶಾಕಿರಣʼ ಎಂಬ ಕಾರ್ಯಕ್ರಮದಡಿಯಲ್ಲಿ ಅಭಿಯಾನ ರೂಪದಲ್ಲಿ ಕಣ್ಣಿನ ಶಿಬಿರಗಳು, ಕನ್ನಡಕ ವಿತರಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗಳ ಚಟುವಟಿಕೆಗಳನ್ನು ಹಂತ ಹಂತವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆಸಲಾಗುವುದು. 2023-24ನೇ ಸಾಲಿನಲ್ಲಿ ಚಿತ್ರದುರ್ಗ, ರಾಯಚೂರು, ಉತ್ತರ ಕನ್ನಡ ಮತ್ತು ಮಂಡ್ಯ ಜಿಲ್ಲೆಗಳಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು ಎಂದು ಹೇಳಿದರು.
ಸಮಾಜದ ದುರ್ಬಲ ವರ್ಗಗಳಲ್ಲಿ ಕ್ಷಯರೋಗವನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆಹಚ್ಚಲು ಸಮುದಾಯ ಆಧಾರಿತ ತಪಾಸಣಾ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ, ಪ್ರತಿ ಜಿಲ್ಲೆಗೆ ಎರಡರಂತೆ ಕೈಚಾಲಿತ-ಕ್ಷ-ಕಿರಣ ಉಪಕರಣವನ್ನು ಒದಗಿಸಲಾಗುವುದು. ಪ್ರತಿ X-ray ಯಂತ್ರಕ್ಕೆ 20 ಲಕ್ಷ ರೂ. ದಂತೆ ಒಟ್ಟು ಮೂರು ಕೋಟಿ ರೂ. ಒದಗಿಸಲಾಗುವುದು ಎಂದು ತಿಳಿಸಿದರು.
ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳನ್ನು ಪತ್ತೆಹಚ್ಚಲು ಮತ್ತು ಅಗತ್ಯ ಔಷಧಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸಲು ಪ್ರಾಯೋಗಿಕವಾಗಿ ರಾಜ್ಯದ ನಾಲ್ಕು ವಿಭಾಗಗಳ ಎಂಟು ಜಿಲ್ಲೆಗಳಲ್ಲಿ ಸಮಗ್ರ ತಪಾಸಣೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ 15 ಸಿ.ಟಿ ಸ್ಕ್ಯಾನಿಂಗ್ ಮತ್ತು ಆರು ಎಂ.ಆರ್.ಐ ಸ್ಕ್ಯಾನಿಂಗ್ ಕೇಂದ್ರಗಳನ್ನು ಕೆಲವು ಜಿಲ್ಲಾಸ್ಪತ್ರೆಗಳಲ್ಲಿ ಈಗಾಗಲೇ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಿ, ಉಚಿತ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುತ್ತಿದೆ. ಈ ಸೇವೆಗಳನ್ನು ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು ಎಂದು ಹೇಳಿದರು.
ರಾಜ್ಯವು ಈಗಾಗಲೇ ಮಾಹಿತಿ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವಂತೆ ಆರೋಗ್ಯ ತಂತ್ರಜ್ಞಾನದ ಆವಿಷ್ಕಾರಗಳ ಅಳವಡಿಕೆಯಲ್ಲಿಯೂ ಪ್ರಮುಖ ಕೇಂದ್ರವಾಗುವ ಗುರಿ ಹೊಂದಿದೆ. ಈ ನಿಟ್ಟಿನಲ್ಲಿ ಎಂಟು ಕೋಟಿ ರೂ.ಗಳ ವೆಚ್ಚದಲ್ಲಿ ಕರ್ನಾಟಕ ಆರೋಗ್ಯ ತಂತ್ರಜ್ಞಾನ ಪ್ರಯೋಗಾಲಯವನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಯೋಜನೆ ಹಾಗೂ ಆರೋಗ್ಯ ದಾಖಲಾತಿಗಳ ಡಿಜಿಟಲೀಕರಣ ಸೇರಿದಂತೆ ಇಲಾಖೆಯ ಇನ್ನಿತರ ಎಲ್ಲಾ ಅಂತರ್ಜಾಲ ಉಪಕ್ರಮಗಳನ್ನು ಅನುಷ್ಠಾನ ಮಾಡಲು ಕರ್ನಾಟಕ ಡಿಜಿಟಲ್ ಹೆಲ್ತ್ ಸೊಸೈಟಿಯನ್ನು ಸ್ಥಾಪನೆ ಮಾಡಲಾಗುವುದು ಎಂದು ಹೇಳಿದರು.