ಬೆಂಗಳೂರು: ರಾಜ್ಯದ ವಿವಿಧೆಡೆ ಶನಿವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಹಾಗೂ ಐದು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ‘ರೆಡ್ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ
ಧಾರಾಕಾರ ಮಳೆಯಾಗುವ ಸಂಭವವಿದೆ. ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ‘ಅಲರ್ಟ್’ ನೀಡಲಾದ ಜಿಲ್ಲೆಗಳಲ್ಲಿ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವೂ ಇದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ.
ಭಾನುವಾರವೂ ಕರಾವಳಿಯ ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ನೀಡಲಾಗಿದೆ. ಇದೇ 25ರವರೆಗೆ ಒಳನಾಡಿನ ಕರಾವಳಿ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಬಲವಾದ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.