ಸುಳ್ಯ:ಸುಳ್ಯದಲ್ಲಿ ರಾತ್ರಿ ವೇಳೆ ಮಳೆಯಾಗಿದೆ. ಶನಿವಾರ ಬೆಳಗ್ಗಿನ ಜಾವ 3 ಗಂಟೆಯ ವೇಳೆಗೆ ಸುಳ್ಯ ನಗರ ಸೇರಿದಂತೆ ಕೆಲವೆಡೆ ಸಾಧಾರಣ ಮಳೆಯಾಗಿದೆ. ಗುಡುಗು,ಸಿಡಿಲಿನ ಅಬ್ಬರದೊಂದಿಗೆ ಮಳೆ ಸುರಿದಿದೆ. ಕಳೆದ ಕೆಲವು ದಿನಗಳಿಂದ ಸುಳ್ಯ ಪರಿಸರದಲ್ಲಿ ವಿಪರೀತ ಸೆಕೆಯ ವಾತಾವರಣ ಉಂಟಾಗಿತ್ತು.ರಾಜ್ಯದ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ
ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಎಚ್ಚರಿಕೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ದಿನ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಈ ಜಿಲ್ಲೆಗಳ ಜತೆಗೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಗದಗ ಜಿಲ್ಲೆಯ ಕೆಲವೆಡೆ ಇದೇ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಶನಿವಾರದಿಂದ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ.ಬೆಂಗಳೂರಿನಲ್ಲಿ ಎರಡು ದಿನ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಸಂಜೆ ಅಥವಾ ರಾತ್ರಿ ಅವಧಿಯಲ್ಲಿ ಮಳೆ ಬರುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.












