ಸುಬ್ರಹ್ಮಣ್ಯ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು
ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆಯಿತು.ಕಾಲೇಜಿನ ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ನಂದಾ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷೆ ವಿಮಲಾ ರಂಗಯ್ಯ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸುಳ್ಯದ ನ್ಯಾಯವಾದಿ ಭಾನುಪ್ರಕಾಶ್ ಪೆರುಮುಂಡ ಯುವ ಸಮೂಹ ಮಾದಕ ವಸ್ತುಗಳ ಸೇವನೆಗೆ ಬಲಿಯಾಗುತ್ತಿದ್ದಾರೆ. ಇಂತಹ ದುಶ್ಚಟಗಳಿಂದ ವಿದ್ಯಾರ್ಥಿಗಳ ಜೀವನ ಹಾಳಾಗುವುದಲ್ಲದೆ ಆರೋಗ್ಯದಲ್ಲಿ ದುಷ್ಪರಿಣಾಮಗಳು ಉಂಟಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಉತ್ತಮ ಶಿಕ್ಷಣ ಪಡೆದು ಆದರ್ಶ ಪ್ರಜೆಗಳಾಗಿ ಬಾಳಬೇಕು.
ದೇಶದಲ್ಲಿ ಸ್ವಾಸ್ಥ್ಯ ಸಮಾಜವನ್ನು ನಾವೆಲ್ಲರೂ ಸೇರಿ ನಿರ್ಮಾಣ ಮಾಡಬೇಕು ಎಂದು ಹೇಳಿದರು. ಸುಬ್ರಹ್ಮಣ್ಯ ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷ ಸತೀಶ್ ಟಿ.ಎನ್ ಪ್ರಾಸ್ತವಿಕವಾಗಿ ಮಾತನಾಡಿದರು. ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಗಿರಿಧರ ಸುಂದರ ಶುಭಕೋರಿದರು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ರತ್ನಾವತಿ, ಸುಬ್ರಹ್ಮಣ್ಯ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶೈಲಜಾ, ವಲಯ ಮೇಲ್ವಿಚಾರಕ ಬಾಲಕೃಷ್ಣ ಗೌಡ ಕೆ. ಉಪಸ್ಥಿತರಿದ್ದರು.
ಸೇವಾಪ್ರತಿನಿಧಿ ಶೈಲಜಾ ಸ್ವಾಗತಿಸಿದರು. ಬಾಲಕೃಷ್ಣ ಗೌಡ ಕೆ. ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕ ಕೃಷ್ಣ ಭಟ್ ವಂದಿಸಿದರು.









