ಸುಳ್ಯ:ಮಾದಕ ವಸ್ತುಗಳ ವ್ಯಸನದಿಂದಾಗಿ ಯುವ ಜನಾಂಗದ ಬದುಕು ನಾಶವಾಗುತ್ತಿದೆ. ಈ ಹಿನ್ನಲೆಯಲ್ಲಿ ಮಾದಕ ವಸ್ತುಗಳ ತಡೆಗೆ ಸರಕಾರಗಳು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿದೇಶದಿಂದ ದೇಶಕ್ಕೆ ಬರುವ ಮಾದಕ ದ್ರವ್ಯಗಳನ್ನು ತಡೆಯಲು ಕೇಂದ್ರ ಸರಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಅದರಂತೆ ದೇಶದಲ್ಲಿ
ಮಾದಕ ವಸ್ತುಗಳ ಸಾಗಾಟ, ಬಳಕೆ ತಡೆಯುವ ನಿಟ್ಟಿನಲ್ಲಿ ಮತ್ತು ಇದರ ವಿರುದ್ಧ ಜಾಗೃತಿ ಮೂಡಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಗ್ರಾಮಗಳು, ನಗರಗಳು ಸೇರಿದಂತೆ ಮಾದಕ ವಸ್ತುಗಳ ಪಿಡುಗು ಎಲ್ಲೆಡೆ ವ್ಯಾಪಕವಾಗುತಿದೆ.ಸರಕಾರಗಳು ಹಾಗೂ ಇಲಾಖೆಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇದನ್ನು ತಡೆಯಾಲು ಎಲ್ಲರೂ ಒಟ್ಟಾಗಿ ಪ್ರಯತ್ನ ನಡೆಸಬೇಕು ಮತ್ತು ವ್ಯಾಪಕ ಜಾಗೃತಿ ಮೂಡಿಸುವ ಅನಿವಾರ್ಯತೆ ಇದೆ ಎಂದರು.
ಯುವಜನಾಂಗದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಯೂತ್ ಕಮೀಷನ್ ನೇಮಕ ಮಾಡಬೇಕು ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು. ಯುವಜನಾಂಗಕ್ಕೆ ನಿರುದ್ಯೋಗ, ಮಾದಕ ವ್ಯಸನಗಳ ಚಟ, ಆರ್ಥಿಕ, ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸಲು ಸೂಕ್ತ ನಿರ್ದೇಶನಗಳನ್ನು ನೀಡುವ ನಿಟ್ಟಿನಲ್ಲಿ ಯೂತ್ ಕಮೀಷನ್ ನೇಮಕ ಅಗತ್ಯ ಎಂದು ಹೇಳಿದರು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಚರ ನೇಮಕಾತಿ ವಿವಾದದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೇಮಕ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು. ವೀಕ್ಷಕರು ಈಗಾಗಲೇ ಅಭಿಪ್ರಾಯ ಸಂಗ್ರಹ ಮಾಡಿ ವರದಿ ನೀಡಿದ್ದಾರೆ. ಈ ವರದಿಯ ಆಧಾರದಲ್ಲಿ ಕೆಪಿಸಿಸಿ ಅಧ್ಯಕ್ಷರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಮಹಮ್ಮದ್ ಇಕ್ಬಾಲ್ ಎಲಿಮಲೆ, ನಗರ ಪಂಚಾಯತ್ ಸದಸ್ಯರಾದ ಕೆ.ಎಸ್.ಉಮ್ಮರ್, ಡೇವಿಡ್ ಧೀರಾ ಕ್ರಾಸ್ತಾ, ರಾಜು ಪಂಡಿತ್, ಸಿದ್ದಿಕ್ ಕೊಕ್ಕೊ, ಸಮಾಜಿಕ ಜಾಲ ತಾಣ ವಿಭಾಗದ ಇಕ್ಬಾಲ್ ಸುಣ್ಣಮೂಲೆ ಉಪಸ್ಥಿತರಿದ್ದರು.