ಬ್ರಿಜ್ಟೌನ್:ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿ ಫೈನಲ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ವಿರಾಟ್ ಕೊಹ್ಲಿ ಸಮಯೋಚಿತ ಅರ್ಧಶತಕದ (76) ನೆರವಿನಿಂದ ಭಾರತ ತಂಡವು ನಿಗದಿತ 20 ಓವರ್ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿದೆ.ಟಾಸ್ ಗೆದ್ದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಮೊದಲ ಓವರ್ನಲ್ಲಿ ಮೂರು ಬೌಂಡರಿ ಗಳಿಸಿದ ವಿರಾಟ್ ಕೊಹ್ಲಿ ಉತ್ತಮ
ಆರಂಭ ನೀಡಿದರು.ಆದರೆ
ಎರಡನೇ ಓವರ್ನಲ್ಲಿ ನಾಯಕ ರೋಹಿತ್ ಶರ್ಮಾ (9) ಹಾಗೂ ರಿಷಬ್ ಪಂತ್ (0) ಅವರನ್ನು ಹೊರದಬ್ಬಿದ ಎಡಗೈ ಸ್ಪಿನ್ನರ್ ಕೇಶವ್ ಮಹಾರಾಜ್ ಡಬಲ್ ಆಘಾತ ನೀಡಿದರು. ಸೂರ್ಯಕುಮಾರ್ ಯಾದವ್ (3) ಸಹ ವೈಫಲ್ಯ ಅನುಭವಿಸಿದರು. ಇದರಿಂದಾಗಿ 34 ರನ್ ಗಳಿಸುವಷ್ಟರಲ್ಲಿ ಭಾರತ ಮೂರು ಪ್ರಮುಖ ವಿಕೆಟ್ಗಳನ್ನು ಕಳೆದುಕೊಂಡಿತು.ಈ ಹಂತದಲ್ಲಿ ಜೊತೆಗೂಡಿದ ಕೊಹ್ಲಿ ಹಾಗೂ ಅಕ್ಷರ್ ಅಮೂಲ್ಯ ಜೊತೆಯಾಟದಲ್ಲಿ ಭಾಗಿಯಾಗುವ ಮೂಲಕ ತಂಡಕ್ಕೆ ಆಸರೆಯಾದರು. ಕೊಹ್ಲಿ-ಅಕ್ಷರ್ ಜೋಡಿ ನಾಲ್ಕನೇ ವಿಕೆಟ್ಗೆ 72 ರನ್ ಪೇರಿಸಿದರು.31 ಎಸೆತಗಳಲ್ಲಿ 47 ರನ್ ಗಳಿಸಿದ ಅಕ್ಷರ್ ರನೌಟ್ ಆಗುವ ಮೂಲಕ ಪೆವಿಲಿಯನ್ಗೆ ಮರಳಿದರು. ಅಕ್ಷರ್ ನಾಲ್ಕು ಸಿಕ್ಸರ್ ಹಾಗೂ ಒಂದು ಬೌಂಡರಿ ಗಳಿಸಿದರು.
ಮತ್ತೊಂದೆಡೆ ದಕ್ಷಿಣ ಆಫ್ರಿಕಾದ ಬೌಲರ್ಗಳನ್ನು ಸಮರ್ಥವಾಗಿ ಎದುರಿಸಿದ ವಿರಾಟ್, ಟೂರ್ನಿಯಲ್ಲಿ ಮೊದಲ ಅರ್ಧಶತಕದ ಸಾಧನೆ ಮಾಡಿದರು. ಅಲ್ಲದೆ ಒಟ್ಟಾರೆಯಾಗಿ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ 38ನೇ ಅರ್ಧಶತಕ ಗಳಿಸಿದರು.
ಅರ್ಧಶತಕದ ಬಳಿಕ ಬಿರುಸಿನ ಬ್ಯಾಟಿಂಗ್ ಮೂಲಕ ಕೊಹ್ಲಿ ಸ್ಕೋರ್ ಏರಿಸಿದರು. ಶಿವಂ ದುಬೆ ಅವರೊಂದಿಗೆ ಕೊಹ್ಲಿ ಅರ್ಧಶತಕದ ಜೊತೆಯಾಟದಲ್ಲಿ ಭಾಗಿಯಾದರು.ಕೊಹ್ಲಿ 59 ಎಸೆತಗಳಲ್ಲಿ ಆರು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 76 ರನ್ ಗಳಿಸಿದರು. ಶಿವಂ ದುಬೆ 27 ರನ್ಗಳ (16 ಎಸೆತ, 3 ಬೌಂಡರಿ, 1 ಸಿಕ್ಸರ್) ಉಪಯುಕ್ತ ಕಾಣಿಕೆ ನೀಡಿದರು. ಹಾರ್ದಿಕ್ ಪಾಂಡ್ಯ 5* ಹಾಗೂ ರವೀಂದ್ರ ಜಡೇಜ 2 ರನ್ ಗಳಿಸಿದರು.
ದಕ್ಷಿಣ ಆಫ್ರಿಕಾದ ಪರ ಕೇಶವ ಮಹಾರಾಜ್ ಹಾಗೂ ಹೆನ್ರಿ ನಾಕಿಯಾ ತಲಾ ಎರಡು ಮತ್ತು ರಬಾಡ ಹಾಗೂ ಜಾನ್ಸೆನ್ ತಲಾ ಒಂದು ವಿಕೆಟ್ ಗಳಿಸಿದರು.














