ನವದೆಹಲಿ: ಯುಎಸ್ಎ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ವೇಳಾಪಟ್ಟಿಯನ್ನು ಅಂತರಾಷ್ಟ್ರೀಯ ಕ್ರಿಕೆಟ್ ಸಮಿತಿ ಶುಕ್ರವಾರ ಬಿಡುಗಡೆ ಮಾಡಿದೆ. ಜೂನ್ 1ರಂದು ಮಿನಿ ವಿಶ್ವಕಪ್ ಆರಂಭವಾಗಲಿದ್ದು, ಜೂನ್ 29ರಂದು ಮುಕ್ತಾಯಗೊಳ್ಳಲಿದೆ.
ಉದ್ಘಾಟನಾ ಪಂದ್ಯ ಆತಿಥೇಯ ಯುಎಸ್ಎ ಹಾಗೂ ಕೆನಡಾ ನಡುವೆ ನಡೆಯಲಿದೆ. ಬಹುನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಜೂನ್ 09 ರಂದು ನ್ಯೂಯಾರ್ಕ್ನಲ್ಲಿ ನಡೆಯಲ್ಲಿದೆ.
ಟೀಂ ಇಂಡಿಯಾ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಭಾರತವನ್ನು
ಹೊರತುಪಡಿಸಿ ಪಾಕಿಸ್ತಾನ, ಐರ್ಲೆಂಡ್, ಕೆನಡಾ ಮತ್ತು ಆತಿಥೇಯ ಯುಎಸ್ಎ ಕೂಡ ಈ ಗುಂಪಿನಲ್ಲಿ ಸ್ಥಾನ ಪಡೆದಿವೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 05 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ಈ ಪಂದ್ಯ ನ್ಯೂಯಾರ್ಕ್ನಲ್ಲಿ ನಡೆಯಲಿದೆ. ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವು ಜೂನ್ 09ರಂದು ನ್ಯೂಯಾರ್ಕ್ನಲ್ಲಿ ನಡೆಯಲಿದೆ.
ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಯುಎಸ್ಎನಲ್ಲೇ ಆಡಲಿದ್ದು, ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಯುಎಸ್ಎನಲ್ಲಿ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸೆಮಿಫೈನಲ್ ಪಂದ್ಯಗಳು ಜೂನ್ 26 ಮತ್ತು 27 ರಂದು ನಡೆಯಲಿವೆ. ಜೂನ್ 29 ರಂದು ಫೈನಲ್ ಪಂದ್ಯ ನಡೆಯಲಿದೆ.









