ಚೆನ್ನೈ:ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ನಟ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಭರದಿಂದ ಸಿದ್ಧತೆ ನಡೆಸುತ್ತಿದ್ದು, ಈ ಸಂಬಂಧ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಟಿವಿಕೆ ಪಕ್ಷಕ್ಕೆ
ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದ್ದು, ಈ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅವಕಾಶ ಕೋರಿದರು. ಈ ಮಧ್ಯೆ ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಇಂದು ಕಾಂಗ್ರೆಸ್ ಅಧಿಕೃತವಾಗಿ ಘೋಷಿಸಿದೆ. ಆ ಮೂಲಕ ಡಿಎಂಕೆಯೊಂದಿಗಿನ ದೀರ್ಘಕಾಲದ ಮೈತ್ರಿಯನ್ನು ಕಡಿದುಕೊಂಡಿದೆ.
ಈ ಬಗ್ಗೆ ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ಗಿರೀಶ್ ಚೋಡಂಕರ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
‘ಟಿವಿಕೆ ಮುಖ್ಯಸ್ಥ ವಿಜಯ್ ಅವರು ಸರ್ಕಾರ ರಚಿಸಲು ಬೆಂಬಲ ನೀಡುವಂತೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ವಿನಂತಿಸಿದ್ದರು. ಕಾಂಗ್ರೆಸ್ ಜಾತ್ಯತೀತ, ಪ್ರಗತಿಪರ ಸಿದ್ದಾಂತದ ಮೇಲೆ ನಂಬಿಕೆ ಇಟ್ಟಿರುವ ಪಕ್ಷವಾಗಿದೆ. ತಮಿಳುನಾಡಿನ ಜನರ ತೀರ್ಪನ್ನು ಗೌರವಿಸುವುದು, ಎತ್ತಿಹಿಡಿಯುವುದು ನಮ್ಮ ಸಾಂವಿಧಾನಿಕ ಕರ್ತವ್ಯವಾಗಿದೆ. ಕಾಂಗ್ರೆಸ್ ತಮಿಳುನಾಡು ಘಟಕ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷವು (ಸಿಎಲ್ಪಿ) ಸರ್ಕಾರ ರಚಿಸಲು ಟಿವಿಕೆಗೆ ಪೂರ್ಣ ಬೆಂಬಲ ನೀಡಲು ನಿರ್ಧರಿಸಿದೆ’ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.











