ಸುಳ್ಯ: ಕೋವಿಡ್ ರೂಪಾಂತರಿ ತಳಿ ಪತ್ತೆಯಾಗಿರುವ ಹಿನ್ನಲೆಯಲ್ಲಿ ಮತ್ತು ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಕೋವಿಡ್ ತಡೆಗೆ ಸುಳ್ಯ ತಾಲೂಕಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸುಳ್ಯ ತಾಲೂಕು ಪಂಚಾಯತ್ ಸಾಮಾನ್ಯ ಸಭೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಅಭಿಷೇಕ್ ವಿ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಯಿತು.ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿ
ಸರಕಾರದಿಂದ ಬರುವ ಮಾರ್ಗಸೂಚಿಗಳನ್ನು ಪಾಲಿಸಲು ಎಲ್ಲಾ ಕ್ರಮ ಕೈಗೊಳ್ಳಬೇಕು. ಎಲ್ಲಾ ಇಲಾಖೆಗಳು ಜಂಟಿಯಾಗಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಕೋವಿಡ್ ಟೆಸ್ಟ್ ಹೆಚ್ಚಿಸಿಕೊಳ್ಳಬೇಕು. ಆಸ್ಪತ್ರೆಗಳಲ್ಲಿ ಕೋವಿಡ್ ವಾರ್ಡ್, ಆಕ್ಸಿಜನ್ ವ್ಯವಸ್ಥೆ ಮಾಡಿಕೊಳ್ಳಬೇಕು. ಕ್ವಾರಂಟೈನ್ ವ್ಯವಸ್ಥೆಗಳು,
ಗಡಿಗಳಲ್ಲಿ ಚೆಕ್ ಪೋಸ್ಟ್, ಮಾಡಿಕೊಳ್ಳಬೇಕು. ಗಡಿ ಪ್ರದೇಶವಾದ ಕಾರಣ ಸುಳ್ಯದಲ್ಲಿ ಕೋವಿಡ್ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದರು. ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಬರುವ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸಬೇಕು, ಅದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದು ಆಡಳಿತಾಧಿಕಾರಿಗಳು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕಿನಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿ ಮಾಡಲು ಸೂಚನೆ ನೀಡಲಾಯಿತು.
ಜಲಜೀವನ್ ಮಿಷನ್ ಯೋಜನೆಯಲ್ಲಿ ಶಾಲೆ, ಅಂಗನವಾಡಿಗಳಿಗೆ ಕುಡಿಯುವ ನೀರು ಸರವರಾಜಿಗೆ ಆದ್ಯತೆ ನೀಡಬೇಕು ಎಂದು ಸೂಚಿಸಲಾಯಿತು. ಸಾಕು ಪ್ರಾಣಿಗಳಿಗೆ ಮೇವು, ನೀರಿಗೆ ಕೊರತೆ ಆಗದಂತೆ ಕ್ರಮ ಕೈಗೊಳ್ಳಲು ಪಶುಪಾಲನಾ ಇಲಾಖೆಗೆ ತಾ.ಪಂ. ಆಡಳಿತಾಧಿಕಾರಿಗಳು ತಿಳಿಸಿದರು. ಗೋಮಾಳ ಜಾಗ ಸರ್ವೆ ಮಾಡಿ ಗಡಿ ಗುರುತು ಮಾಡಲು ನಿರ್ದೇಶನ ನೀಡಲಾಯಿತು. ಎಲ್ಲಾ ಇಲಾಖೆಗಳು ತಮಗೆ ಬಂದಿರುವ ಅನುದಾನ ಸಮರ್ಪಕವಾಗಿ ಮುಗಿಸಬೇಕು, ಯಾವುದೇ ಅನುದಾನ ಲ್ಯಾಪ್ಸ್ ಆಗದಂತೆ ಕ್ರಮ ಕೈಗೊಳ್ಳಬೇಕು. ತಮ್ಮ ಇಲಾಖಾ ವ್ಯಾಪ್ತಿಯ ಕಾಮಗಾರಿ ಶೀಘ್ರ ಮುಗಿಸಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ ಅಧಿಕಾರಿಗಳಿಗೆ ಸೂಚಿಸಿದರು.
ಡೆಪ್ಯುಟಿ ತಹಶೀಲ್ದಾರ್ ಮಂಜುನಾಥ್ ಎಂ. ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.















