ಮಂಗಳೂರು:ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಇದೇ 30ರಂದು ನಗರದ ಸೇಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಪ್ರಾಂಗಣದಲ್ಲಿ ನಡೆಸಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತಿಳಿಸಿದರು.ಉದ್ಯೋಗ ಮೇಳದ ಪೂರ್ವತಯಾರಿಗಾಗಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು
ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಈ ಮೇಳವನ್ನು ಹಮ್ಮಿಕೊಳ್ಳಲಾಗುತ್ತಿದೆ. 250ಕ್ಕೂ ಹೆಚ್ಚಿನ ಉದ್ಯೋಗದಾತ ಸಂಸ್ಥೆಗಳು ಹಾಗೂ 10ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ ಇದೆ’ ಎಂದರು.‘ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹೆಸರು ನೋಂದಾಯಿಸಿರುವ 10,089 ಅಭ್ಯರ್ಥಿಗಳು, ಯುವನಿಧಿ ಯೋಜನೆಯ 8,708 ಫಲಾನುಭವಿಗಳು, ಯುವ ಉದ್ಯೋಗ ಸೇತು ಪೋರ್ಟಲ್ನಲ್ಲಿ ಉದ್ಯೋಗಕ್ಕಾಗಿ ನೋಂದಾಯಿಸಿರುವ ಆಕಾಂಕ್ಷಿಗಳು ಹಾಗೂ ಇತರು ಈ ಅವ ಕಾಶವನ್ನು ಬಳಸಿಕೊಳ್ಳಬಹುದು. ಜಿಲ್ಲೆಯಲ್ಲಿ 17 ಎಂಜಿನಿಯರಿಂಗ್ ಕಾಲೇಜುಗಳು, 11 ಪಾಲಿಟೆಕ್ನಿಕ್ಗಳು, ಸರ್ಕಾರಿ ಹಾಗೂ ಖಾಸಗಿ ಸೇರಿ 25 ಕೈಗಾರಿಕಾ ತರಬೇತಿ ಸಂಸ್ಥೆಗಳು, 115 ಪದವಿ ಕಾಲೇಜುಗಳು, 210 ಪದವಿ ಪೂರ್ವ ಕಾಲೇಜುಗಳು ಹಾಗೂ 611 ಪ್ರೌಢಶಾಲೆಗಳಿಂದ ಸರಿಸುಮಾರು
65 ಸಾವಿರ ವಿದ್ಯಾರ್ಥಿಗಳು ವ್ಯಾಸಂಗವನ್ನು ಪೂರ್ಣಗೊಳಿಸುತ್ತಾರೆ. ಅವರು ಉದ್ಯೋಗ ಪಡೆಯಲು ಇದು ಉತ್ತಮ ಅವಕಾಶ ಕಲ್ಪಿಸಲಿದೆ. ಕೌಶಲರಹಿತರೂ ಇದರ ಪ್ರಯೋಜನ ಪಡೆಯಬಹುದು’ ಎಂದರು.
ಉದ್ಯೋಗ ಮೇಳವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸುವರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಆರ್ ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್,ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಹರ್ಷದ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜ, ಪ್ರೊಬೇಷನರಿ ಐಎಎಸ್ ಅಧಿಕಾರಿ ಅರ್ಚಿತ್ ಡೊಂಗ್ರೆ ಭಾಗವಹಿಸಿದ್ದರು. ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಲಾಯಿತು.














