ಬೆಂಗಳೂರು: ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ತಿಂಗಳೊಳಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.ವಿಧಾನಸಭೆಯಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ‘ಕಂದಾಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಸಂಖ್ಯೆ ದೊಡ್ಡ ಪ್ರಮಾಣದಲ್ಲಿದೆ. ಈಗ 1,000 ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆ ಭರ್ತಿಗೆ
ಮುಖ್ಯಮಂತ್ರಿಯವರು ಒಪ್ಪಿಗೆ ನೀಡಿದ್ದಾರೆ’ ಎಂದರು.ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗೆ ಹಂತ ಹಂತವಾಗಿ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಸಾಗುವಳಿ ಭೂ ಮಂಜೂರಾತಿಗಾಗಿ ಬಗರ್ ಹುಕುಂ (ಅಕ್ರಮ ಸಕ್ರಮ) ಯೋಜನೆಯ ಅಡಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಶಾಸಕ ಹರೀಶ್ ವಿ.ಪಿ. ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಗರ್ ಹುಕುಂ ಕಾನೂನನ್ನು ಜಾರಿಗೆ ತಂದಿರುವುದೇ ಬಡವರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ. ಅರ್ಹ ಫಲಾನುಭವಿಗಳಿಗೆ ಭೂ ಮಂಜೂರು ಮಾಡುವುದು ಸರಕಾರದ ಕರ್ತವ್ಯವೂ ಹೌದು. ಹೀಗಾಗಿ ತಿರಸ್ಕೃತ ಅಥವಾ ಅನರ್ಹಗೊಂಡ ಬಗರ್ ಹುಕುಂ ಅರ್ಜಿಗಳಲ್ಲಿ ತಪ್ಪಾಗಿದ್ದರೆ, ನಿಯಮ ಮೀರಿ ಅನರ್ಹಗೊಂಡಿದ್ದರೆ ಮತ್ತೊಮ್ಮೆ ಪುನರ್ ಪರಿಶೀಲನೆ ಮಾಡಲಾಗುವುದು ಎಂದರು.