ಬೆಂಗಳೂರು:ಮೇಘಾಲಯದ ನೂತನ ರಾಜ್ಯಪಾಲರಾಗಿ ಮೈಸೂರಿನ ಮಾಜಿ ಸಂಸದ ಸಿ.ಎಚ್. ವಿಜಯಶಂಕರ್ ನೇಮಕಗೊಂಡಿದ್ದಾರೆ. ಮಹಾರಾಷ್ಟ್ರದ ಮಾಜಿ ಸ್ಪೀಕರ್ ಹರಿಭಾವು ಬಾಗಡೆ, ಮಾಜಿ ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ಮತ್ತು
ಬಿಜೆಪಿಯ ಹಿರಿಯ ನಾಯಕರಾದ ಒಪಿ ಮಾಥುರ್ ಮತ್ತು ಮೈಸೂರಿನ ಮಾಜಿ ಸಂಸದ ಸಿ.ಎಚ್. ವಿಜಯಶಂಕರ್ ಸೇರಿದಂತೆ ಆರು ಮಂದಿ ನೂತನ ರಾಜ್ಯಪಾಲರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ. ವಿಜಯಶಂಕರ್ ಅವರು ಹುಣಸೂರು ಕ್ಷೇತ್ರದ ಶಾಸಕ ಹಾಗೂ ಮೈಸೂರಿನ ಸಂಸದರಾಗಿಯೂ ಸೇವೆ ಸಲ್ಲಿಸಿದ್ದಾರೆ. ವಿಜಯಶಂಕರ್ ಅವರು 1994ರಿಂದ 1998ರವರೆಗೆ ಮೊದಲ ಬಾರಿಗೆ ಹುಣಸೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿದ್ದರು. ಬಳಿಕ 1998 ಹಾಗೂ 2004ರಲ್ಲಿ ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು. 2010ರಿಂದ 2016ರವರೆಗೆ ವಿಧಾನಪರಿಷತ್ ಸದಸ್ಯರಾಗಿದ್ದರು. 2010ರಲ್ಲಿ ಕರ್ನಾಟಕ ಮಂತ್ರಿಮಂಡಲದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.