ಸಿಲೆಟ್: ಮಹಿಳೆಯರ ಏಷ್ಯಾ ಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿರುವ ಭಾರತ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.ಈ ಮೂಲಕ ಏಳನೇ ಸಲ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ

ಶ್ರೀಲಂಕಾ 20 ಓವರ್‌ಗಳಲ್ಲಿ ಒಂಬತ್ತು ವಿಕೆಟ್ ನಷ್ಟಕ್ಕೆ 65 ರನ್ ಗಳಿಸಲಷ್ಟೇ ಸಾಧ್ಯವಾಯಿತು.ಬಳಿಕ ಗುರಿ ಬೆನ್ನಟ್ಟಿದ ಭಾರತ 8.3 ಓವರ್‌ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಕೇವಲ 25 ಎಸೆತಗಳಲ್ಲಿ ಅರ್ಧಶತಕ (ಅಜೇಯ 51 ರನ್, 6 ಬೌಂಡರಿ, 3 ಸಿಕ್ಸರ್) ಗಳಿಸಿದ ಸ್ಮೃತಿ ಮಂದಾನ ಭಾರತದ ಗೆಲುವನ್ನು ಸುಲಭಗೊಳಿಸಿದರು. ನಾಯಕಿ ಹರ್ಮನ್‌ಪ್ರೀತ್ ಕೌರ್ 11 ರನ್ ಗಳಿಸಿ ಅಜೇಯರಾಗುಳಿದರು. ಭಾರತದ ಪರ ರೇಣುಕಾ ಸಿಂಗ್ ಕೇವಲ 5 ರನ್ನಿಗೆ ಮೂರು ವಿಕೆಟ್ ಕಿತ್ತು ಮಿಂಚಿದರು. ರಾಜೇಶ್ವರಿ ಗಾಯಕವಾಡ್ ಹಾಗೂ ಸ್ನೇಹಾ ರಾಣಾ ತಲಾ ಎರಡು ವಿಕೆಟ್ ಕಬಳಿಸಿದರು.ಲಂಕಾ ಪರ 10ನೇ ಕ್ರಮಾಂಕದಲ್ಲಿ ಕ್ರೀಸಿಗಿಳಿದ ಇನೊಕಾ ರಣವೀರಾ ಗರಿಷ್ಠ 18 ರನ್ ಗಳಿಸಿ ಔಟಾಗದೆ ಉಳಿದರು. ಇನ್ನುಳಿದಂತೆ ಒಶದಿ ರಣಸಿಂಘೆ 13 ರನ್ ಗಳಿಸಿದ್ದನ್ನು ಹೊರತುಪಡಿಸಿದರೆ ಇತರೆ ಯಾವ ಬ್ಯಾಟರ್ ಎರಡಂಕಿಯನ್ನು ತಲುಪಲಿಲ್ಲ.