ಸುಳ್ಯ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಸುಳ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುಳ್ಯ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸ್ ಠಾಣೆಯಲ್ಲಿ ಧಾಖಲಾದ ಪೋಕ್ಸೋ ಪ್ರಕರಣ, ಮಹಿಳಾ ದೌರ್ಜನ್ಯ ಪ್ರಕರಣ ಮತ್ತಿತರ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದರು. ಪೊಲೀಸ್ ಉಪನಿರೀಕ್ಷಕಿ ಸರಸ್ವತಿ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಬಗ್ಗೆ
ಮಾಹಿತಿ ನೀಡಿದರು. ಪೋಕ್ಸೋ ಪ್ರಕರಣ, ಮಾದಕ ವ್ಯಸನಗಳ ತಡೆಗೆ ಪೊಲೀಸ್ ಇಲಾಖೆಯ ವತಿಯಿಂದ ಕೈಗೊಂಡ ಜಾಗೃತಿ ಕಾರ್ಯಕ್ರಮಗಳ ಬಗ್ಗೆ ಅವರು ವಿವರಿಸಿದರು.
ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಸಿಬ್ಬಂದಿಗಳ ಕೆಲಸದ ವಾತಾವರಣಗಳ ಬಗ್ಗೆ ಡಾ.ಚೌಧರಿ ಮಾಹಿತಿ ಪಡೆದರು.
ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿ ಮಹಿಳಾ ದೌರ್ಜನ್ಯ,ಪೋಕ್ಸೋ ಮತ್ತಿತರ ಪ್ರಕರಣಗಳ ಬಗ್ಗೆ ಮಾಹಿತಿ ಪಡೆಯಲಾಗಿದ್ದು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ. ಮಹಿಳೆಯರ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಬರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಮಹಿಳೆಯರ ಮೇಲೆ ಆದ ಅನ್ಯಾಯ, ದೌರ್ಜನ್ಯ ಕುರಿತು ಬಂದ ಯಾವುದೇ ದೂರುಗಳನ್ನು ಕೂಲಂಕುಷವಾಗಿ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಮತ್ತೆ ಅಂತಹಾ ಪ್ರಕರಣಗಳು ಮರು ಕಳಿಸದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ, ಸಿದ್ದಿಕ್ ಕೊಕ್ಕೊ, ಪ್ರಹ್ಲಾದ್ ಬೆಳ್ಳಿಪ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.